ಸಮನ್ವಯತೆಯಿಂದ ಕಾರ್ಯನಿರ್ವಹಿಸಿ : ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

18CBP5DCMeeting
Published on

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಕರೊನಾ ಸೋಂಕು ಹರಡದಿರಲು ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಕರೊನಾ ವೈರಸ್ ಹರಡುವಿಕೆ ನಿಯಂತ್ರಣ ಮತ್ತು ಮುಂಜಾಗ್ರತ ಕ್ರಮಗಳ ಜಾರಿ ಕುರಿತು ಜಿಲ್ಲಾಡಳಿತ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿದೇಶಗಳಿಂದ ಜಿಲ್ಲೆಗೆ ಆಗಮಿಸುವ ಜನರು ತಕ್ಷಣ ಸ್ವಯಂಪ್ರೇರಣೆಯಿಂದ ಜಿಲ್ಲಾ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು. ಆರ್‌ಟಿಒ ಇಲಾಖೆ ಚೆಕ್ ಪೋಸ್ಟ್‌ಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ, ಹೊರ ರಾಜ್ಯಗಳಿಂದ ಆಗಮಿಸುವವರ ಮೇಲೆ ನಿಗಾ ವಹಿಸಬೇಕು ಎಂದರು.

ಪ್ರತಿದಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಬಿ.ಎಂ.ಯೋಗೇಶ್‌ಗೌಡ ನೇತೃತ್ವದ ಜಿಲ್ಲಾ ಸರ್ವೇಕ್ಷಣಾ ಸಮಿತಿಯು ಪ್ರತಿ ತಾಲೂಕಿನಲ್ಲಿನ ಐಸೋಲೇಷನ್ ವಾರ್ಡ್ ಹಾಗೂ ಕೊರೆಂಟೈನ್ ವಾರ್ಡ್‌ಗಳಲ್ಲಿನ ಬೆಳವಣಿಗೆಗಳ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಸಾರ್ವಜನಿಕರು ಮುಖಗವಸು (ಮಾಸ್ಕ್)ಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಹಳೇಯದನ್ನು ಹತ್ತಿರದ ಆರೋಗ್ಯ ಇಲಾಖೆಯಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನೀಡಬೇಕು ಎಂದರು.ಕೊವೀಡ್-19 ಬಗೆಗಿನ ವದಂತಿಗೆ ಸ್ಪಷ್ಟನೆ, ಸೂಕ್ತ ಮಾಹಿತಿಯನ್ನು ನೀಡಲು ಈಗಾಗಲೇ 104 ಸಂಖ್ಯೆಯನ್ನೊಳಗೊಂಡ ಉಚಿತ ಸಹಾಯವಾಣಿ ಕೇಂದ್ರ ಪ್ರಾರಂಭಿಸಲಾಗಿದೆ. ಇದನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದರು. ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್, ಜಿಲ್ಲಾ ಶಸ ಚಿಕಿತ್ಸಕ ಡಾ ಅನಿಲ್‌ಕುಮಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net