

ಹಾಸನ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಕರಪತ್ರ, ಬ್ಯಾನರ್‌ಗಳ ಮುದ್ರಣ ನಂತರ ಚುನಾವಣಾ ಆಯೋಗಕ್ಕೆ ಸಮರ್ಪಕವಾದ ಮಾಹಿತಿಯನ್ನು ಮುದ್ರಕರು ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಸಿ. ಸತ್ಯಭಾಮಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಿಂಟರ್ ಮತ್ತು ಪಬ್ಲಿಕೇಷನ್‌ಗಳ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಬಂಧಿಸಿದ ಕರಪತ್ರವನ್ನು ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಡಿಕ್ಲರೇಷನನ್ನು ಮೂರು ದಿನಗಳ ಒಳಗೆ ಜಿಲ್ಲಾ ಚುನಾವಣಾಧಿಕಾರಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಮುದ್ರಿಸುವ ಕರಪತ್ರದಲ್ಲಿ ಮುದ್ರಕರ ಹೆಸರು, ಮುದ್ರಣದ ಸಂಖ್ಯೆಗಳನ್ನು ತಪ್ಪದೇ ನಮೂದಿಸಬೇಕು. ಮುದ್ರಣಕ್ಕೆ ತಗುಲುವ ವೆಚ್ಚವನ್ನು ಸಹ ನೀಡಬೇಕು. ಯಾವುದೇ ತಪ್ಪು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಮುದ್ರಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಕರಪತ್ರದಲ್ಲಿರುವ ವಿಷಯಗಳು ದ್ವೇಷಪೂರಿತವಾಗಿರದೇ, ಇನ್ನೊಬ್ಬರನ್ನು ನಿಂದಿಸುವುದು, ಮಾನಹಾನಿ ಆಗುವುದು, ಸಮಾಜದಲ್ಲಿ ಶಾಂತಿ ಕದಡುವುದು, ಇನ್ನೊಬ್ಬರನ್ನು ಅಪಮಾನಿಸುವುದು, ಯಾವುದೇ ಧರ್ಮವನ್ನು ಹೀಯಾಳಿಸುವುದು ಸೇರಿದಂತೆ ಮತ್ತಿತರ ನಿಯಮಗಳನ್ನು ಉಲ್ಲಂಘಿಸಬಾರದು. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರಗಳನ್ನು ಮುದ್ರಿಸುವುದು, ಜಾಹೀರಾತುಗಳನ್ನು ಪ್ರಚಾರ ಮಾಡಿದ್ದಲ್ಲಿ ಅಂತಹವರ ಮೇಲೆ ಪ್ರಜಾಪ್ರಾತಿನಿಧ್ಯ ಕಾಯ್ದೆಯಡಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ವೆಚ್ಚ ನೋಡೆಲ್ ಅಧಿಕಾರಿ ತಫ್ಝುಲ್ ಹುಸೈನ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಜಿಲ್ಲಾ ಮುದ್ರಕರ ಸಂಘದ ಅಧ್ಯಕ್ಷ ಹೇಮಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.