ಸಮರ್ಪಕವಾಗಿ ವಿದ್ಯುತ್ ಪೂರೈಸಿ

Tke photo grea
ತರೀಕೆರೆ ತಾಪಂನಲ್ಲಿ ಏರ್ಪಡಿಸಿದ್ದ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹೊರ ತಂದಿರುವ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಎನ್.ಜಿ.ರಮೇಶ್, ಎನ್.ಚರಣ್‌ರಾಜ್, ದೀಪಕ್, ರಮೇಶ್, ರೇಣುಕಮ್ಮ ಇತರರಿದ್ದರು.
Published on

ತರೀಕೆರೆ: ತಾಲೂಕಿನೆಲ್ಲೆಡೆ ಅನಿಯಮಿತ ವಿದ್ಯುತ್ ನಿಲುಗಡೆಯಿಂದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಜಿ.ರಮೇಶ್ ಹೇಳಿದರು.

ತಾಪಂನಲ್ಲಿ ಗುರುವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅನಿಯಮಿತ ವಿದ್ಯುತ್ ನಿಲುಗಡೆ ಮಾಡುತ್ತಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಜತೆ ಮಕ್ಕಳ ಕಲಿಕೆಗೆ ಅಡ್ಡಿಯಾಗುತ್ತಿದೆ. ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇನ್ನುಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಮೆಸ್ಕಾಂ ಎಇಇ ಮಂಜುನಾಥ್ ಅವರಿಗೆ ತಿಳಿಸಿದರು.

ಪಟ್ಟಣದಲ್ಲಿ ವಿವಿಧೆಡೆಯಿಂದ ಆಗಮಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ಗಳು ಬೆಳಗ್ಗೆ ಮತ್ತು ರಾತ್ರಿ ವೇಳೆ ಬಸ್‌ಸ್ಟ್ಯಾಂಡ್ ಒಳಗೆ ಹೋಗುತ್ತಿಲ್ಲ ಎಂಬ ದೂರುಗಳಿವೆ. ಇದರಿಂದ ಪ್ರಯಾಣಿಕರು ರಸ್ತೆ ಪಕ್ಕ ಕಾಯುವಂತಾಗಿದೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಅವ್ಯವಸ್ಥೆ ಸರಿಪಡಿಸಬೇಕು ಎಂದು ತಿಳಿಸಿದರು.

ಸರ್ಕಾರ ಪಡಿತರ ಚೀಟಿ ತಿದ್ದುಪಡಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹೊರ ತಂದಿರುವ 2025ನೇ ಸಾಲಿನ ಪೋಸ್ಟರ್ ಬಿಡುಗಡೆ ಮಾಡಲಾಯಿತು. ವಿಶೇಷ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸಿಡಿಪಿಒ ಎನ್.ಚರಣ್‌ರಾಜ್, ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನಿರ್ದೇಶಕರಾದ ಮಣಿಕಂಠ, ಮೆಹಬೂಬ್, ದೇವರಾಜ್, ಜ್ಞಾನಮೂರ್ತಿ, ಕೆಎಸ್‌ಆರ್‌ಟಿಸಿ ಅಧಿಕಾರಿ ರಮೇಶ್, ಆಹಾರ ಶಿರಸ್ತೇದಾರ್ ರೇಣುಕಮ್ಮ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ದೀಪಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net