ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಂಬೇಡ್ಕರ್

12rajesh12
Published on

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡುವ ಮೂಲಕ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ ಹೇಳಿದರು.

ನಗರದ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪುರುಷರ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜಯಂತಿ ಹಾಗೂ ನಿಲಯದ 40ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ಸಾಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಒಳಗೊಂಡಿದೆ. ಈ ಮೂಲಕ 12ನೇ ಶತಮಾನದ ವಚನ ಚಳುವಳಿಯ ಪಿತಾಮಹಾ ಬಸವಣ್ಣನವರ ನಂತರ ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ಮಾಡಿದರು. ಅವರ ತತ್ವ-ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಸಾಗಬೇಕಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ರಾಮಸಮುದ್ರ ಪುಟ್ಟಸ್ವಾಮಿ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮಾಜಿಕ ಪರಿಕಲ್ಪನೆಯನ್ನು ಅರಿತುಕೊಂಡು ದೇಶ ಸಾಗಬೇಕಿದೆ. ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುಂದುವರಿಯುವುದು ಇಂದಿನ ಯುವಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಕುಮುದಾ ಕೇಶವಮೂರ್ತಿ, ವಕೀಲ ಪ್ರಸನ್ನ ಕುಮಾರ್, ನೀಲಯ ಪಾಲಕ ಚೇತನ್, ಗ್ರಂಥಪಾಲಕ ಗುರುಸ್ವಾಮಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹದೇವಪ್ರಸಾದ್, ಉಪಾಧ್ಯಕ್ಷ ಆನಂದ್‌ಕುಮಾರ್, ಕಾರ್ತಿಕ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net