

ಹಾಸನ: ಶಾಸಕ ಸ್ವರೂಪ್ ಪ್ರಕಾಶ್ ಅವರು ನಗರದ ಆಡುವಳ್ಳಿಗೆ ಶುಕ್ರವಾರ ಭೇಟಿ ನೀಡಿ ನಗರಸಭೆ ಅಧಿಕಾರಿಗಳು, ಒಳಚರಂಡಿ ಮಂಡಳಿ ಅಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಕೂಡಲೇ ಸಮಸ್ಯೆಗಳನ್ನು ಬಗೆಹರಿಯುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಅಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಶಿಥಿಲಗೊಂಡಿರುವ ಆಂಜನೇಯ ಸ್ವಾಮಿ ದೇವಾಲಯವನ್ನು ಹೊಸದಾಗಿ ನಿರ್ಮಿಸಲು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಅನುಮತಿ ನೀಡುವಂತೆ ಸ್ಥಳೀಯರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ದೊರೆತಿದ್ದು ಶೀಘ್ರದಲ್ಲಿ ದೇವಾಲಯದ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಸ್ಥಳೀಯರು ಹಾಗೂ ಗ್ರಾಮಸ್ಥರಿಗೆ ಭರವಸೆ ನೀಡಿದರು. ನಂತರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಅಭಿವೃದ್ಧಿಗಾಗಿ ಈಗಾಗಲೇ ಅನುದಾನ ಬಿಡುಗಡೆಗೊಳಿಸಲಾಗಿದ್ದು ಶೀಘ್ರದಲ್ಲಿ ಕಾಮಗಾರಿಯನ್ನು ಕೈಗೊಂಡು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.