ಸಮಾನ ಹಕ್ಕು ನೀಡಿದ ಸಂವಿಧಾನ

Mannalli
Published on

ಬೀದರ್: ಸಂವಿಧಾನವು ದೇಶದ ಪ್ರತಿ ಪ್ರಜೆಗೂ ಸಮಾನ ಹಕ್ಕುಗಳನ್ನು ನೀಡಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಹೇಳಿದರು.

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ನ್ಯಾಯ ದಿನಾಚರಣೆ ಹಾಗೂ ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅವಕಾಶಗಳ ಸದ್ಬಳಕೆಯಿಂದ ಸರ್ವರ ಬೆಳವಣಿಗೆ ಸಾಧ್ಯವಿದೆ ಎಂದು ತಿಳಿಸಿದರು.

ಸಾಧನೆಗೆ ಯಾವುದೂ ಅಡ್ಡಿ ಆಗಲಾರದು. ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ನಿರಂತರ ಪರಿಶ್ರಮ ವಹಿಸಿದರೆ ಖಂಡಿತ ಯಶಸ್ಸು ಪಡೆಯಬಹುದು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಅಶೋಕ ಮಾನೂರೆ ಮಾತನಾಡಿ, ಹಿಂದೆ ಸಮಾನತೆ ಇರಲಿಲ್ಲ. ಬಸವಣ್ಣ, ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಮೊದಲಾದ ಮಹಾ ಪುರುಷರ ಪ್ರಯತ್ನದಿಂದಾಗಿ ಎಲ್ಲರಿಗೂ ಸಮಾನ ಹಕ್ಕು ದೊರಕಿವೆ ಎಂದು ತಿಳಿಸಿದರು.

ಸಂವಿಧಾನದ 371(ಜೆ) ಕಲಂ ತಿದ್ದುಪಡಿಯು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲು ಕಲ್ಪಿಸಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಸಲಹೆ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ವಿನಾಯಕ ಕೊತಮಿರ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು. ಓದಿನಲ್ಲಿ ನಿರಂತರತೆ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಏನನ್ನಾದರೂ ಸಾಧಿಸುವ ಛಲ ಬೆಳೆಸಿಕೊಳ್ಳಬೇಕು. ಮಹಾನ್ ಪುರುಷರನ್ನು ಆದರ್ಶವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಅಸಿಸ್ಟಂಟ್ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ನಾಗನಾಥ ಕಮಠಾಣೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶಂಕರೆಪ್ಪ ಜನಕಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಶರಣಪ್ಪ ಕಣಜಿ, ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸಂಜೀವಕುಮಾರ ತಾಂದಳೆ, ಸಮಾಜಶಾಸ್ತ್ರ ಉಪನ್ಯಾಸಕ ರಜನಿಕಾಂತ, ಶ್ರೀನಿವಾಸ, ಡಾ. ಶ್ರೀಕಾಂತ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಊರ್ವಶಿ ಕೂಡ್ಲಿ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಹೇಶಕುಮಾರ ಆರ್. ನಿರೂಪಿಸಿದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಹೇಮಾವತಿ ಪಾಟೀಲ ವಂದಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net