

*ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ ಆರೋಪ
ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳು ವಿಫಲವಾಗಿವೆ. ದಲಿತ ಸಮುದಾಯದ ಪ್ರತಿಭಟನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ ಎಂದು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್. ನಾಗಯ್ಯ ಆರೋಪಿಸಿದರು.
ಸಂಸತ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಈಗಾಗಲೇ ಬಿಎಸ್ಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ ಸಮುದಾಯದವರು ನಡೆಸುತ್ತಿದ್ದಾರೆ ಎಂದುಕೊಂಡಿದ್ದೇವು. ಆದರೇ ಅದು ಕಾಂಗ್ರೆಸ್ ಪ್ರಾಯೋಜಿತ ಪ್ರತಿಭಟನೆಯಾಗಿದ್ದು, ಸಮುದಾಯದ ಮುಖಂಡರು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ದೇಶದಲ್ಲಿ ಅಧಿಕಾರ ನಡೆಸಿದ ಪಕ್ಷಗಳು ಅಂಬೇಡ್ಕರ್ ಫೋಟೊವನ್ನು ಇಟ್ಟುಕೊಂಡು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿವೆ. ಸಂವಿಧಾನ ಯಥವತ್ತಾಗಿ ಜಾರಿಯಾದರೆ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ. ಆದರೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಸಾಕಷ್ಟು ಯೋಜನೆಗಳನ್ನು ದಲಿತರಿಗೆ ಸಿಗದಂತೆ ಮಾಡಿವೆ. ಒಳಗೊಳಗೆ ಕಾನೂನುಗಳನ್ನು ತಿರುಚುವ ಮೂಲಕ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಎಂದರು.
ದೇಶದಲ್ಲಿ ಕಾಂಗ್ರೆಸ್ 55 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದು ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರ ಸಂವಿಧಾನ ಪೀಠಿಕೆ ಓದಿಸುತ್ತಿದ್ದಾರೆ. ಕಾಂಗ್ರೆಸ್ ತನ್ನ ಕುತಂತ್ರ ಬುದ್ದಿಯನ್ನು ಬಿಡಬೇಕು ಎಂದರು.
ಗೋಷ್ಠಿಯಲ್ಲಿ ಬಿಎಸ್ಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಉಸ್ತುವಾರಿಗಳಾದ ಪ್ರಕಾಶ್, ರಾಜಶೇಖರ್, ಜಿಲ್ಲಾ ಸಂಯೋಜಕ ಪುಟ್ಟಸ್ವಾಮಿ, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮಹೇಶ್, ಕಾರ್ಯದರ್ಶಿ ಅಭಿ ಹಾಜರಿದ್ದರು.