

ಹಲಗೂರು: ಮಳವಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾ.17ರಂದು ನಡೆಯಲಿರುವ 7ನೇ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸುಂದ್ರಪ್ಪ ಲಿಂಗಪಟ್ಟಣ ಅವರನ್ನು ಸ್ವಾಗತ ಸಮಿತಿ ಸದಸ್ಯರು ಆಮಂತ್ರಣ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಿದರು.
ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿ, ವಿಕಲಚೇತನರು, ಬಡವರು, ನಿರ್ಗತಿಕರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸುಂದ್ರಪ್ಪ ಕನ್ನಡ ನಾಡು-ನುಡಿ ಸಂಸ್ಕೃತಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದರು.
ಸುಂದ್ರಪ್ಪ ಲಿಂಗಪಟ್ಟಣ ಮಾತನಾಡಿ, ಕುಗ್ರಾಮದಲ್ಲಿ ಹುಟ್ಟಿ ಬೆಳೆದು ಶಿಕ್ಷಕನಾದ ನನ್ನನ್ನು ಗುರುತಿಸಿ, ತಾಲೂಕು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಪದಾಧಿಕಾರಿಗಳಿಗೆ ಅಭಿನಂದನೆ. ಹಲವು ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ನನಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ಕೃಷಿ ಮಾಡುವ ಬಯಕೆ ಮೂಡಿತು. ಅಂದಿನಿಂದಲೂ ಹಲವು ಪುಸ್ತಕಗಳನ್ನು ಬರೆದು ಪ್ರಕಟಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ, ತಾಲೂಕು ಅಧ್ಯಕ್ಷ ಎಲ್.ಚೇತನ್ ಕುಮಾರ್, ಜಿಲ್ಲಾ ಗೌರವ ಕಾರ್ಯದರ್ಶಿ ಹುಸ್ಕೂರು ಕೃಷ್ಣೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ವಿನಯ್‌ಕುಮಾರ್, ಪದಾಧಿಕಾರಿಗಳಾದ ದೇವರಾಜು, ಡಿ.ರಾಮು, ಕೃಷ್ಣ, ಚುಂಚಣ್ಣ ಇತರರು ಇದ್ದರು.