ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

20-KGL PHOTO-5,
ತಾಲೂಕಿನ ಧನಗೆರೆ ಗ್ರಾಮದ ಬಳಿ ಅಪಘಾತಕ್ಕೀಡಾದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿರುವುದು.
Published on

ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ (209) ಯಲ್ಲಿ ಬುಧವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೆ ಬೈಕ್ ಸವಾರ ಮೃತಪಟ್ಟಿದ್ದಾರೆ.
ಧನಗೆರೆ ಗ್ರಾಮದ ಪೂಜಯ್ಯ ಎಂಬುವರ ಮಗ ನಂಜಪ್ಪ (48) ಮೃತರು. ಈತ ಎಂದಿನಂತೆ ಜಮೀನು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕೊಳ್ಳೇಗಾಲ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ನಂಜಪ್ಪನ ತಲೆಗೆ ತೀವ್ರ ಪೆಟ್ಟಾದ ಕಾರಣ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಘಟನೆಯಿಂದ ಕುಪಿತಗೊಂಡ ಗ್ರಾಮಸ್ಥರು ಬಸ್‌ಗೆ ಕಲ್ಲು ತೂರಿ ಅಕ್ರೋಶ ಹೊರಹಾಕಿದರು. ಕಳೆದ ಎರಡು ತಿಂಗಳಲ್ಲಿ ಧನಗೆರೆ ಗ್ರಾಮದ ರಸ್ತೆಯಲ್ಲಿ ಅಪಘಾತವಾಗಿ ನಾಲ್ಕೈದು ಜನ ಮೃತಪಟ್ಟಿದ್ದಾರೆ. ಇದ್ದರಿಂದ ರಸ್ತೆಯಲ್ಲಿ ಸಂಚರಿಸಲು ಜನ ಹೆದರುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದಲ್ಲಿ ರಸ್ತೆ ಸುರಕ್ಷತೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ್ದ ಗ್ರಾಮಾಂತರ ಠಾಣಾ ಪೊಲೀಸರು ಗ್ರಾಮಸ್ಥರನ್ನು ಸಮಾಧಾನಪಡಿಸಿ ಮೃತದೇಹವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮೃತನ ಸಂಬಂಧಿಕರು ಬಸ್ ಚಾಲಕನ ವಿರುದ್ಧ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net