

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸರಳ, ಸುಗಮ ಜೀವನಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಅದಕ್ಕೆ ಅನುಗುಣವಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಬನವಾರಿಲಾಲ್ ವರ್ವ ಹೇಳಿದರು.
ಹುಬ್ಬಳ್ಳಿಯ ಕಿಮ್ಸ್ನಲ್ಲಿ ಭಾರತ ಸರ್ಕಾರದ ಅಡಿಪ್ ಯೋಜನೆಯಡಿ ಅಂಗವಿಕಲರಿಗೆ ಹಾಗೂ ರಾಷ್ಟ್ರೀಯ ವಯೋಶ್ರಿ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆ ವಿತರಿಸುವ ಪ್ರಧಾನ ಮಂತ್ರಿ ದಿವ್ಯಾಶಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ವಿಕಾಸದಲ್ಲಿ ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಕೊಡುಗೆ ಇರಲಿ ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯವಾಗಿದೆ ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಅಲಿಂಪಕೊ (ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ) ನೆರವಿನಿಂದ ದಿವ್ಯಾಶಾ ಕೇಂದ್ರ ತೆರೆಯಲಾಗಿದೆ. ಇಲ್ಲಿಂದ ಅರ್ಹರಿಗೆ ನೇರವಾಗಿ ಸಾಧನ-ಸಲಕರಣೆಗಳನ್ನು ವಿತರಿಸಲಾಗುವುದು. ಶಿಬಿರಗಳ ಮೂಲಕ ಫಲಾನುಭವಿಗಳ ಆಯ್ಕೆ ಮಾಡುವ ಪ್ರಮೇಯ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಇಲ್ಲಿಯೇ ಸಾಧನ-ಸಲಕರಣೆಗಳನ್ನು ತಯಾರಿಸಲಾಗುವುದು ಎಂದು ಹೇಳಿದರು.
ಮೇಯರ್ ರಾಮಪ್ಪ ಬಡಿಗೇರ, ಹುಡಾ ಅಧ್ಯಕ್ಷ ಸಾಕಿರ ಸನದಿ, ಪಾಲಿಕೆ ಸದಸ್ಯರಾದ ಶಿವು ಮೆಣಸಿನಕಾಯಿ, ಚಂದ್ರಶೇಖರ ಮನಗುಂಡಿ, ರೂಪಾ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಇತರರು ಇದ್ದರು. ಕಿಮ್್ಸ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ ಸ್ವಾಗತಿಸಿದರು.