

ಮೈಸೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನುವ ಕುರಿತು ನಗರದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಸಿದ ಅವರು, ಸುಳ್ಳು ದಾಖಲೆ ಪತ್ರವನ್ನು ಸೃಷ್ಟಿ ಮಾಡಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಇತ್ತೀಚಿಗೆ ಶಾಸಕರ ಪತ್ರಗಳನ್ನೂ ನಕಲಿ ಮಾಡಿದ್ದರು. ನಕಲಿ ಪತ್ರವೆಂದು ಗೊತ್ತಿದ್ದರೂ ವ್ಯಾಪಕ ಪ್ರಚಾರ ದೊರೆಯಿತು. ಚಲುವರಾಯಸ್ವಾಮಿ ವಿಷಯದಲ್ಲೂ ಅದೇ ರೀತಿ ಆಗಿದೆ. ನಾವು ಪತ್ರ ಬರೆದಿಲ್ಲ, ಅದು ನಕಲಿ ಮತ್ತು ಆ ವಿಷಯವೇ ನಮಗೆ ಗೊತ್ತಿಲ್ಲವೆಂದು ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ನಕಲಿ ದಾಖಲೆ ಸೃಷ್ಟಿ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಇದೊಂದು ರಾಜಕೀಯ ಆಟ. ಇದನ್ನು ರಾಜಕೀಯವಾಗಿಯೇ ಎದುರಿಸಲಾಗುವುದು. ಅಧಿಕಾರಿಗಳಿಗೆ ತೊಂದರೆಯಾದರೆ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದರು.
ಪ್ರತಿಪಕ್ಷದವರಿಗೆ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಕೊಟ್ಟ ಮಾತನ್ನು ಈಗಾಗಲೇ ಈಡೇರಿಸಲಾಗಿದೆ. 5 ವರ್ಷವಾದರೂ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಅಂದುಕೊಂಡಿದ್ದರು. ಆದರೆ, ಸರ್ಕಾರ ಬಂದ ಎರಡು ತಿಂಗಳಲ್ಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ಹೇಳಿದರು.
ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇಂಡಿಯಾ ಮೈತ್ರಿಕೂಟ ದಿನದಿಂದ ದಿನಕ್ಕೆ ಪ್ರಬಲವಾಗುತ್ತಿದೆ. ರಾಹುಲ್ ಗಾಂಧಿ ವಿರುದ್ಧ ಸುಳ್ಳು ಕೇಸ್‌ಗಳನ್ನು ಹಾಕಿದ್ದರು. ಈ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದನ್ನು ಅರಿತ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಕುಗ್ಗಿಸಲು ಯತ್ನಿಸುತ್ತಿವೆ. ನಿತ್ಯ ಒಂದಲ್ಲ ಒಂದು ರೀತಿ ಷಡ್ಯಂತ್ರ ನಡೆಯುತ್ತಿದೆ. ನಕಲಿ ಆರೋಪ, ಯಾವುದೇ ದಾಖಲೆ ನೀಡದೆ ನಿತ್ಯ ಆಕ್ಷೇಪ ಎಂದು ಕೃಷ್ಣ ಭೈರೇಗೌಡ ಕಿಡಿಕಾರಿದರು.
ದೇಶದಲ್ಲಿ ಜನರು ಜಾಗೃತರಾಗುತ್ತಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಬಡವರ ಸ್ಥಿತಿ ಕುಗ್ಗುತ್ತಿದೆ. ಮುಂದಿನ ದಿನಗಳಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ವೈಎಸ್‌ಟಿ ಟ್ಯಾಕ್ಸ್ ಆರೋಪ ಕುರಿತು ನಿರ್ದಿಷ್ಟ ದಾಖಲೆಗಳಿದ್ದರೆ ಎಚ್.ಡಿ.ಕುಮಾರಸ್ವಾಮಿ ಕೊಡಲಿ, ತನಿಖೆ ಮಾಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ಅದನ್ನು ಬಿಟ್ಟು ಹಿಟ್ ಆ್ಯಂಡ್ ರನ್ ಆರೋಪ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದರು.
ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಅಭಿಯಾನ
ಸರ್ಕಾರಿ ಭೂಮಿಗಳ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಅದಕ್ಕಾಗಿ ಸದ್ಯದಲ್ಲೇ ರಾಜ್ಯಾದ್ಯಂತ ಒತ್ತುವರಿ ತೆರವು ಅಭಿಯಾನ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಮೊದಲು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒತ್ತುವರಿ ತೆರವು ನಡೆಯಲಿದೆ. ಬಳಿಕ ರಾಜ್ಯದ ವಿವಿಧ ಭಾಗದಲ್ಲೂ ಈ ಅಭಿಯಾನ ಮುಂದುವರಿಯಲಿದೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ. ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಯಾಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು. ಅಧಿಕಾರಿಗಳಿಗೆ ಸಂಪೂರ್ಣ ಫ್ರೀ ಹ್ಯಾಂಡ್ ನೀಡಲಾಗಿದೆ. ಸರ್ಕಾರ ಈ ಬಗ್ಗೆ ಸ್ಪಷ್ಟವಾಗಿದೆ ಎಂದರು.
ಸದ್ಯದಲ್ಲೇ ಕಂದಾಯ ಅದಾಲತ್‌ಗೂ ಚಾಲನೆ ನೀಡಲಾಗುವುದು. ಸಣ್ಣಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.