ಸರ್ಕಾರದ ಮೇಲೆ ಆಧಾರರಹಿತ ಆರೋಪ ಮಾಡುತ್ತಿರುವ ವಿಪಕ್ಷಗಳು: ದೇವರಾಜೇಗೌಡ

ಸರ್ಕಾರದ ಮೇಲೆ ಆಧಾರರಹಿತ ಆರೋಪ ಮಾಡುತ್ತಿರುವ ವಿಪಕ್ಷಗಳು: ದೇವರಾಜೇಗೌಡ
Published on

ಹಾಸನ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ಎಲ್ಲಾ ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿನಿತ್ಯ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ದೇವರಾಜೇಗೌಡ ಕಿಡಿಕಾರಿದರು.

ಚುನಾವಣಾಪೂರ್ವದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ಅದರಲ್ಲಿ ಸ್ತ್ರೀ ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ ಯೋಜನೆಗಳನ್ನು ಜಾರಿಗೊಳಿಸಿ ಬುಧವಾರ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ಒಳಗೆ ಯುವ ನಿಧಿ ಯೋಜನೆಯನ್ನೂ ಕೂಡ ಜಾರಿಗೆ ತರಲಾಗುತ್ತಿದೆ. ಆದರೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದಂತಹ ಬಿಜೆಪಿ ನಾಯಕರು ನಮ್ಮ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷದವರು ಇತ್ತೀಚೆಗೆ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿರುವುದು ಹಾಸ್ಯಾಸ್ಪದ. ನಾಲ್ಕು ವರ್ಷಗಳ ಕಾಲ ನಾಪತ್ತೆಯಾಗಿದ್ದ ಸಂಸದರು ದಿಢೀರನೆ ಪ್ರತ್ಯಕ್ಷರಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಇವರ ಅಧಿಕಾರದ ಅವಧಿಯಲ್ಲಿ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದರು.

ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗ ಸಂಸದರು ಒಂದು ದಿನವೂ ಕೂಡ ಇದರ ಬಗ್ಗೆ ಚಕಾರ ಎತ್ತಲಿಲ್ಲ. ವಿದ್ಯುತ್ ಸಮಸ್ಯೆ ಹಾಗೂ ಹನ್ನೊಂದು ಸಾವಿರ ಟಿಸಿ ವಿತರಣೆ ಮಾಡಿಲ್ಲ ಎಂದು ಆರೋಪಿಸುವ ಸಂಸದರು ಇಷ್ಟು ದಿನ ಇದರ ಬಗ್ಗೆ ನಿಮಗೆ ಅರಿವು ಇರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಜೆಡಿಎಸ್‌ನವರು ಸುಖಾಸುಮ್ಮನೆ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮ ನಿಜ ಬಣ್ಣವನ್ನು ಬಯಲು ಮಾಡಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಗೆವಾಳ್ ದೇವಪ್ಪ, ನಾಯಕರಲ್ಲಿ ಅಶೋಕ್, ನಾಗರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net