ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

bkt-4-5
ಬಾಗಲಕೋಟೆ ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ/ಪಂಗಡದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಲ್ಯಾಪಟಾಪ ವಿತರಣೆ ಮಾಡಿದರು
Published on

ಬಾಗಲಕೋಟೆ: ವಿದ್ಯಾರ್ಥಿಗಳು ಸರ್ಕಾರದ ಸಹಕಾರವನ್ನು ಸದುಪಯೋಗಪಡಿಸಿಕೊಳ್ಳಬೇಕು. ವೈದ್ಯಕೀಯ ವೃತ್ತಿ ಕಠಿಣ ಪರಿಶ್ರಮ ಮತ್ತು ಕೌಶಲ್ಯ ಬಯಸುತ್ತದೆ. ತಂತ್ರಜ್ಞಾನವನ್ನು ಬಳಸಿಕೊಂಡು ವೃತ್ತಿಯಲ್ಲಿ ಕೌಶಲ್ಯಹೊಂದಿ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.

ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ/ಪಂಗಡದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯಕೀಯ ವೃತ್ತಿಯಲ್ಲಿ ಸಾಕಷ್ಟು ಅವಕಾಶಗಳಿವೆ. ತಂತ್ರಜ್ಞಾನದ ಸಹಾಯದಿಂದ ಹೊಸ ಬೆಳವಣಿಗೆಗಳನ್ನು ಗುರುತಿಸಿ ಅಧ್ಯಯನ ಮಾಡಿ. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಉತ್ಕೃಷ್ಟತೆ ಸಾಧಿಸಿ ಎಂದರು.

ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಮಾತನಾಡಿ, ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೂ ಸರ್ಕಾರದ ಯೋಜನೆಯಾದ ಲ್ಯಾಪ್‌ಟಾಪ್ ವಿತರಣೆಯ ಸೌಲಭ್ಯವನ್ನು ಒದಗಿಸುತ್ತಿರುವುದು ಮೆಚ್ಚುವಂತಹ ಸಂಗತಿ. ವಿದ್ಯಾರ್ಥಿಗಳು ಸರ್ಕಾರದ ಈ ಯೋಜನೆಯ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಗಳಾಗುತ್ತಿವೆ. ಕಾಲಕಾಲಕ್ಕೆ ಸರ್ಕಾರಗಳು ಕೂಡ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಪ್ರಾಶಸ್ತ್ಯ ಕೊಡುತ್ತಿವೆ. ಬಿವಿವಿ ಸಂಘದಿಂದಲೂ ಬೀಳೂರು ಗುರುಬಸವ ಉತ್ಸವ ಸಮಿತಿಯಿಂದಲೂ ಪ್ರತಿವರ್ಷ ಬಡವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಖಾಸಗಿ ಕಾಲೇಜುಗಳ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳ ಯೋಜನಾ ವೆಚ್ಚದಡಿ ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನ ೨೭ ವಿದ್ಯಾರ್ಥಿಗಳಿಗೆ ಮತ್ತು ಪಿ.ಎಂ.ಎನ್.ಎಂ ದಂತ ಕಾಲೇಜಿನ ೧೪ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯೆ ಡಾ.ಭುವನೇಶ್ವರಿ ಯಳಮಲಿ, ಡೆಂಟಲ್ ಕಾಲೇಜ್ ಪ್ರಾಚಾರ್ಯ ಡಾ.ಶ್ರೀನಿವಾಸ ವನಕಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಡಾ.ಮಹಾಂತೇಶ ಭೂತಾಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net