

ಧಾರವಾಡ: ಶೋಷಿತ ಬುಡಕಟ್ಟುಗಳ ಯುವಕರು ಸರ್ಕಾರ ನೀಡುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಉನ್ನತ ಮಟ್ಟದ ಹುದ್ದೆಗಳನ್ನು ಪಡೆದು ಜೀವನದಲ್ಲಿ ಸಾಧನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಲೂರು ವೆಂಕಟರಾವ್ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂತ ಶ್ರೀ ಸೇವಾಲಾಲ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿ, ಸೇವಾಲಾಲ ಅವರ ಬದುಕು ಮತ್ತು ಸಾಧನೆಗಳನ್ನು ಹೊಸ ಪೀಳಿಗೆ ಅರ್ಥ ಮಾಡಿಕೊಳ್ಳಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಶಿಕ್ಷಿತರಾಗಿ ಸಮಾಜದ ಮುಖ್ಯವಾಹಿನಿಗೆ ಸೇರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಬಂಜಾರ ಸಮಾಜದ ಅಭಿವೃದ್ಧಿಗಾಗಿ ಆರ್ಥಿಕ ಹಾಗೂ ಸಮಾಜದ ಭವನ ನಿರ್ವಣಕ್ಕೆ ನಿವೇಶನ ನೀಡಿ, ಆರ್ಥಿಕ ಸಹಾಯ ಮಾಡುತ್ತೇನೆ ಎಂದರು.
ಡಾ.ಹರಿಲಾಲ್ ಪವಾರ್ ಅವರು ಸಂತ ಸೇವಾಲಾಲ ಜೀವನ ಹಾಗೂ ಸಾಮಾಜಿಕ ಕೊಡುಗೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ನವನಗರದ ಬಂಜಾರ ಗುರುಪೀಠದ ಶ್ರೀ ತಿಪ್ಪೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪುರುಷೋತ್ತಮ, ವಿಜಯಲಕ್ಷ್ಮೀ ದೊಡ್ಡಮನಿ, ಪಾಂಡುರಂಗ ಪಮ್ಮಾರ, ಇತರರು ಇದ್ದರು.
ಸಮಾಜದ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸ್ವಾಗತಿಸಿದರು. ತಾಯಪ್ಪ ನಾಯಕ್ ನಿರೂಪಿಸಿದರು. ನಾಗರಾಜ್ ನಾಯಕ್ ವಂದಿಸಿದರು.
ಇದಕ್ಕೂ ಪೂರ್ವದಲ್ಲಿ ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದಿಂದ ಶ್ರೀ ಸೇವಾಲಾಲರ ಭಾವಚಿತ್ರದ ಭವ್ಯ ಮೆರವಣಿಗೆಗೆ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು.
EndFragment