ಚನ್ನರಾಯಪಟ್ಟಣ: ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಉತ್ತಮ ಯೋಜನೆಗಳನ್ನು ರೂಪಿಸಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಆರ್.ಮಂಜುನಾಥ್ ಹೇಳಿದರು.
ತಾಲೂಕಿನ ದಿಡಗ ಗ್ರಾಮದ ಬಿಸಿಎಂ ಹಾಸ್ಟೆಲ್ ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಶುಚಿ ಸಂಭ್ರಮ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಸರ್ಕಾರದಿಂದ ಲಭ್ಯವಾಗುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸರ್ಕಾರದಿಂದ ದೊರೆಯುತ್ತಿರುವ ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನ, ಉಚಿತ ನೋಟ್‌ಬುಕ್ ಹಾಗೂ ಇತರ ಸೌಲಭ್ಯಗಳಿಂದ ಅದೆಷ್ಟೋ ಬಡ ಕುಟುಂಬಗಳು ನೆಮ್ಮದಿ ಕಂಡಿವೆ ಎಂದು ತಿಳಿಸಿದರು.
ಹಾಸ್ಟೆಲ್‌ನ 50 ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಶುಚಿ ಸಂಭ್ರಮ ಕಿಟ್ ವಿತರಿಸಲಾಯಿತು. ಹೊಯ್ಸಳ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಬಿ.ಎಚ್.ನಂದೀಶ್, ಅರುಣೋದಯ ವಿದ್ಯಾಸಂಸ್ಥೆಯ ವಿಜ್ಞಾನ ಶಿಕ್ಷಕ ಜಿ.ಚಂದ್ರಶೇಖರ್, ಹಾಸ್ಟೆಲ್‌ನ ನಿಲಯ ಮೇಲ್ವಿಚಾರಕ ಬಿ.ಎಂ.ದೊಡ್ಡೇಗೌಡ ಇತರರು ಇದ್ದರು.