ಸರ್ಕಾರಿ ಗೌರವದೊಂದಿಗೆ ಪಾಪು ಅಂತ್ಯಕ್ರಿಯೆ

17-RNR-04A
Published on

ಹುಬ್ಬಳ್ಳಿ/ ಧಾರವಾಡ / ರಾಣೆಬೆನ್ನೂರು: ಸೋಮವಾರ ರಾತ್ರಿ ನಿಧನ ಹೊಂದಿದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ರಾಣೆಬೆನ್ನೂರು ತಾಲೂಕಿನ ಹಲಗೇರಿಯ ಅವರ ಕುಟುಂಬದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಮಂಗಳವಾರ ಸಂಜೆ ನಡೆಯಿತು.

ಬೆಳಗ್ಗೆ ಹುಬ್ಬಳ್ಳಿ ಕಿಮ್್ಸ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ವಿಶ್ವೇಶ್ವರ ನಗರದ ಸ್ವಗೃಹಕ್ಕೆ ಕೊಂಡೊಯ್ದು, ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಅನುವು ಮಾಡಿಕೊಡಲಾಯಿತು.

ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದೆಸಲಾಯಿತು. ಸರ್ಕಾರದ ವತಿಯಿಂದ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾರಾರ್ಪಣೆ ಮಾಡಿ ಅಂತಿಮ ನಮನ ಸಲ್ಲಿಸಿದರು.

ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ, ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಂಸದ ಪ್ರೊ. ಐ.ಜಿ. ಸನದಿ, ಸಾಹಿತಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು, ಸಾರ್ವಜನಿಕರು ಸೇರಿ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು.

ಬಳಿಕ ಪಾರ್ಥಿವ ಶರೀರವನ್ನು ಧಾರವಾಡಕ್ಕೆ ಕೊಂಡೊಯ್ದು ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಯಿತು. ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ತೋಂಟದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ, ಸಾಹಿತಿಗಳಾದ ಚನ್ನವೀರ ಕಣವಿ, ಗುರುಲಿಂಗ ಕಾಪಸೆ, ಮಾಲತಿ ಪಟ್ಟಣಶೆಟ್ಟಿ, ವೀರಣ್ಣ ರಾಜೂರು, ಜಿ.ಎಂ. ಹೆಗಡೆ, ಶಾಂತಾ ಇಮ್ರಾಪುರ, ವಿಶ್ವೇಶ್ವರಿ ಹಿರೇಮಠ, ಬಸಲಿಂಗಯ್ಯ ಹಿರೇಮಠ, ಡಿ.ಎಂ. ಹಿರೇಮಠ, ಸಂಘದ ಎಲ್ಲ ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು, ಅಭಿಮಾನಿಗಳು ಸೇರಿ ಸಾವಿರಾರು ಜನರು ಅಂತಿಮ ದರ್ಶನ ಪಡೆದರು. 53 ವರ್ಷಗಳಿಂದ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿದ ಪಾಪು ಅವರು ಕನ್ನಡ ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.

ಮಧ್ಯಾಹ್ನ 2.30ಕ್ಕೆ ಪಾರ್ಥಿವ ಶರೀರವನ್ನು ರಾಣೆಬೆನ್ನೂರಿಗೆ ಒಯ್ದು ಶಿವಾ ಹೈಸ್ಕೂಲ್​ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ಹಲಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿ, ಅವರ ಮೂಲ ಮನೆಯಲ್ಲಿ ಪೂಜೆ ಸಲ್ಲಿಸಲಾಯಿತು. ಅಲ್ಲಿ ಸಾರ್ವಜನಿಕರ ದರ್ಶನದ ಬಳಿಕ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಪುತ್ರ ಅಶೋಕ ಪಾಟೀಲ ಅಂತಿಮ ವಿಧಿವಿಧಾನ ನೆರವೇರಿಸಿದರು.

ಕೂಡಲ ಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ, ತರಳಬಾಳು ಶಾಖಾಮಠದ ಡಾ. ಪಂಡಿತಾರಾಧ್ಯ ಸ್ವಾಮೀಜಿ, ಮುಂಡರಗಿಯ ನಿಜಗುಣಾನಂದ ಸ್ವಾಮೀಜಿ, ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಕೃಷಿ ಸಚಿವ ಬಿ.ಸಿ. ಪಾಟೀಲ, ಶಾಸಕ ಅರುಣಕುಮಾರ ಗುತ್ತೂರ, ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ. ಬಣಕಾರ, ಜಿ.ಪಂ. ಅಧ್ಯಕ್ಷ ಬಸನಗೌಡ ದೇಸಾಯಿ, ಶಾಸಕ ರುದ್ರಪ್ಪ ಲಮಾಣಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಹಾಗೂ ಇತರ ಗಣ್ಯರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ಪಾಪು ಅವರನ್ನು ನೋಡಿಕೊಳ್ಳುತ್ತಿದ್ದ ಚಾಲಕ ಸೈಯದ್ ಅವರನ್ನು ಸನ್ಮಾನಿಸಲಾಯಿತು.

ಸರ್ಕಾರದ ನಡೆಗೆ ಖಂಡನೆ: ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ನಾಡೋಜ ಪಾಟೀಲ ಪುಟ್ಟಪ್ಪ ಅವರ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೋಕಾಚರಣೆ ಘೊಷಿಸದಿರುವುದನ್ನು ಸಂಘದ ಪದಾಧಿಕಾರಿಗಳು ಖಂಡಿಸಿದ್ದಾರೆ.

ಪಾಪು ಒಬ್ಬ ವ್ಯಕ್ತಿ ಅಲ್ಲ. ಇಡೀ ಕನ್ನಡ ನಾಡಿನ ಶಕ್ತಿ ಆಗಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಒಂದು ದಿನ ಶೋಕಾಚರಣೆ ಘೊಷಿಸಬೇಕಿತ್ತು. ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಕಾರ್ಯದರ್ಶಿ ಪ್ರಕಾಶ ಉಡಿಕೇರಿ, ಇತರರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net