

ಚಾಮರಾಜನಗರ: ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾ.5 ಮತ್ತು 6 ರಂದು ನಗರದಲ್ಲಿ ಆಯೋಜಿಸಲಾಗಿದ್ದು, ಈ ಸಂಬಂಧ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾ.5 ಮತ್ತು 6 ರಂದು 2 ದಿನಗಳ ಕಾಲ ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ ಮಾ.11ರಂದು ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಮಹಿಳಾ ಕ್ರೀಡಾಕೂಟಗಳ ನಿರ್ವಹಣೆಯಲ್ಲಿ ಯಾವುದೇ ಲೋಪಗಳಾಗದಂತೆ ಕ್ರೀಡಾಕೂಟಗಳ ಸಂಘಟಿಸಲು ಅವಶ್ಯ ಸಿದ್ದತಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕ್ರೀಡಾಕೂಟದಲ್ಲಿ ಗಣ್ಯರಿಂದ ಧ್ವಜಾರೋಹಣ, ಕ್ರೀಡಾಜ್ಯೋತಿ ಸ್ವೀಕಾರ ಕಾರ್ಯಕ್ರಮಗಳು ಇರಲಿವೆ. ಕ್ರೀಡಾಕೂಟ ಸ್ಥಳದಲ್ಲಿ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಬೇಕು. ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು. ಕ್ರೀಡಾಪಟುಗಳಿಗೆ ಯಾವುದೇ ಅನಾನುಕೂಲಗಳು ಉಂಟಾಗದಂತೆ ಗಮನ ಹರಿಸಬೇಕು ಎಂದರು.
ಕ್ರೀಡಾಕೂಟದಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ವಯಸ್ಸಿನ ಆಧಾರದಲ್ಲಿ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ನುರಿತ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲು ದೈಹಿಕ ಶಿಕ್ಷಕರ ನಿಯೋಜನೆ ಅಗತ್ಯವಿದೆ. ಒಟ್ಟಿನಲ್ಲಿ ಕ್ರೀಡಾಕೂಟದ ಅಚ್ಚುಕಟ್ಟು ಆಯೋಜನೆಗೆ ಮುಂದಾಗುವಂತೆ ಸೂಚಿಸಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ದೀಪಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ. ಸುರೇಶ್, ರಾಜ್ಯ ಸರ್ಕಾರಿ ನೌಕಕರ ಸಂಘದ ಜಿಲ್ಲಾಧ್ಯಕ್ಷೆ ರೇಣುಕಾದೇವಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕಕರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.