ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಿದ್ಧತೆ, ಮಾರ್ಗಸೂಚಿ ಪಾಲನೆಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

3
Published on

ಬೆಂಗಳೂರು ಗ್ರಾಮಾಂತರ: ಕೋವಿಡ್ ಮಾರ್ಗಸೂಚಿ ಅನುಸರಿಸಿ ಶಿಷ್ಟಾಚಾರದ ಪ್ರಕಾರ, ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.

ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕ್ರೀಡಾಂಗಣದ ಒಳಾಂಗಣ, ಹೊರಾಂಗಣ, ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಿಗನುಗುಣವಾಗಿ ದೊಡ್ಡಬಳ್ಳಾಪುರ ತಾಲೂಕಿನ ಆರ್.ಎಲ್. ಜಾಲಪ್ಪ ಕಾಲೇಜು, ಕೊಂಗಾಡಿಯಪ್ಪ ಕಾಲೇಜು ಹಾಗೂ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಕ್ರೀಡಾಕೂಟ ನಡೆಯುವ ಸ್ಥಳಗಳಲ್ಲಿ ಆಂಬುಲೆನ್ಸ್ ಹಾಗೂ ಸಿಬ್ಬಂದಿ ನಿಯೋಜನೆ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗೆ ಸೂಚಿಸಿದರು. ತಾಲೂಕುಮಟ್ಟ ಹಾಗೂ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯುವಾಗ ಸ್ಥಳೀಯ ನಗರಸಭೆ ಹಾಗೂ ಪುರಸಭೆಗಳಿಂದ ನೀರು ಸರಬರಾಜು ಮತ್ತು ಸ್ವಚ್ಛತೆ ಕಾಪಾಡುವ ಕಾರ್ಯವಾಗಬೇಕು ಎಂದು ಹೇಳಿದರು.

ಜಿಲ್ಲಾಮಟ್ಟಕ್ಕೆ ಮಾನದಂಡ: ತಾಲೂಕುಮಟ್ಟದಲ್ಲಿ ವಿಜೇತರಾದವರು ಮಾತ್ರವೇ ಜಿಲ್ಲಾಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಎಂದು ಡಿಸಿ ತಿಳಿಸಿದರು. ತಾಲೂಕು ಮಟ್ಟದ ಕ್ರೀಡಾಕೂಟವನ್ನು ಜನವರಿ ಮೊದಲ ವಾರದೊಳಗೆ ತಹಸೀಲ್ದಾರ್ ಅವರ ಸಹಕಾರದೊಂದಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕು ಎಂದು ತಿಳಿಸಿದರು.

ಸಹಕಾರ ಅಗತ್ಯ: ಅಪರ ಜಿಲ್ಲಾಧಿಕಾರಿ ವಿಜಯಾ ಇ.ರವಿಕುಮಾರ್ ಮಾತನಾಡಿ, ಕ್ರೀಡಾಕೂಟ ಆಯೋಜನೆಗೆ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಅಗತ್ಯವಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳ ಹಣಕಾಸಿನ ನೆರವಿನೊಂದಿಗೆ ಕ್ರೀಡಾಕೂಟ ನಡೆಯಲಿದೆ ಎಂದು ತಿಳಿಸಿದರು.

ಪ್ರತಿವರ್ಷದಂತೆ ಆಯೋಜನೆ: ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಖ್ಯವಾಗಿ ಕೋವಿಡ್ ನಿಯಮಗಳನ್ನು ಕಟ್ಟನಿಟ್ಟಾಗಿ ಪಾಲಿಸಲಾಗುವುದು ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಸಭೆಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net