

ಬೇಲೂರು: ರಾಜ್ಯ ಸರ್ಕಾರಿ ನೌಕರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೌಕರರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಶಿಕ್ಷಕರು, ಪ್ರಾಚಾರ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ನನ್ನ ಗೆಲುವಿಗೆ ಶ್ರಮಿಸಿದ ಅಧಿಕಾರಿಗಳ ವರ್ಗ ಹಾಗೂ ಸಿಬ್ಬಂದಿ ಜತೆಗೆ ತಾಲೂಕಿನ ಜನತೆಗೆ, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕಳೆದ ಬಾರಿ ಸೋತಾಗ ಕುಗ್ಗಲಿಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ಈ ಬಾರಿ ಗೆಲುವು ಸಾಧಿಸಿದ್ದೇನೆ. ಗೆದ್ದಿದ್ದೇನೆ ಎಂದು ಬೀಗುವುದಿಲ್ಲ. ಜನಪರ ಆಡಳಿತ ನೀಡಿ ಎಲ್ಲ ವರ್ಗದ ಆಶೋತ್ತರಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ. ಸರ್ಕಾರಿ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಎಲ್ಲರ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ತಹಸೀಲ್ದಾರ್ ಎಂ.ಮಮತಾ ಮಾತನಾಡಿ, ಸರ್ಕಾರಿ ನೌಕರರು ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದೆ ಪ್ರಾಮಾಣಿಕವಾಗಿ ಕೆಲಸ ಮಾಡೋಣ. ಸರ್ಕಾರಿ ನೌಕರರು ಮಾತ್ರ ಸಾರ್ವಜನಿಕ ಸೇವಕರಲ್ಲ. ನಾನು ಸಹ ಸಾರ್ವಜನಿಕ ಸೇವಕ ಅಂತ ಹೇಳುವ ಶಾಸಕರು ವಿರಳ. ಅಂತಹ ಶಾಸಕರಿಗೆ ಯಾವುದೇ ಕಳಂಕ ತರದೇ ಪ್ರಾಮಾಣಿಕವಾಗಿ ಕೆಲಸ ಮಾಡೋಣ ಎಂದರು.
ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ರಾಜ್ಯ ಸಮಿತಿ ಸದಸ್ಯ ಪ್ರಕಾಶ್, ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಹಾಗೂ ಇತರರಿದ್ದರು.