ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವೆ

22 yelandur 02
Published on

ಯಳಂದೂರು: ತಾಲೂಕು ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳನ್ನು ನಿವಾರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.


ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಇತ್ತೀಚೆಗೆ ಶಾಸಕರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ನಾನು ನೌಕರ ಸ್ನೇಹಿ ಶಾಸಕನಾಗಿರುತ್ತೇನೆ. ಸದನದಲ್ಲಿ ನೌಕರರ ಸಮಸ್ಯೆ ಪರವಾಗಿ ಧ್ವನಿ ಎತ್ತುತ್ತೇನೆ. ತಾಲೂಕಿನ ಅಭಿವೃದ್ಧಿಗೆ ಕ್ರಿಯಾ ಯೋಜನೆಯನ್ನು ರೂಪಿಸಿ ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.


ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ. ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರ ಭವನದ ಸುತ್ತುಗೋಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು. ತಾಲೂಕಿನಲ್ಲಿ ಶಿಕ್ಷಕರ ಭವನ ಇಲ್ಲ. ಹಾಗಾಗಿ ಪಟ್ಟಣದಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ನಿವೇಶನ ಕೊಡಿಸಬೇಕು, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸದನದಲ್ಲಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಕ್ರಮ ವಹಿಸುವ ಭರವಸೆಯನ್ನು ಶಾಸಕರು ನೀಡಿದರು.


ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಕಾಂತರಾಜು, ಮಹೇಶ್, ಮಧುಕರ್ ಮಳವಳ್ಳಿ, ಮಲ್ಲಿಕಾರ್ಜುನಸ್ವಾಮಿ, ವಾಲೆ ಮಹದೇವ, ರವಿಕುಮಾರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net