

ಹನೂರು: ಸಸಿಗಳನ್ನು ಪೋಷಿಸಿ, ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಹೆಚ್ಚಿನ ಒತ್ತು ನೀಡಬೇಕು ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು.
ತಾಲೂಕಿನ ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಪರಿಸರ, ಜೀವಶಾಸ್ತ್ರ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಸಸ್ಯ ಶ್ಯಾಮಲ ವಿನೂತನ ಕಾರ್ಯಕ್ರಮದಡಿ ಸಸಿ ನೆಟ್ಟು ಮಾತನಾಡಿದರು.
ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ, ಜಾಗೃತಿ ಹಾಗೂ ಅರಣ್ಯ ಸಂರಕ್ಷಣೆ ಕುರಿತು ಕಾಳಜಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಸಸ್ಯ ಶ್ಯಾಮಲ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿದೆ. ಆದ್ದರಿಂದ ನೆಡುವ ಸಸಿಗಳನ್ನು ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಿಕೊಂಡು ಪೋಷಿಸಿ ಬೆಳೆಸಬೇಕು. ಇದರಿಂದ ಶಾಲಾ ಆವರಣ ಉತ್ತಮ ಪರಿಸರದಿಂದ ಕೂಡಿರುತ್ತದೆ. ಕಲಿಕೆಗೂ ಅನುಕೂಲವಾಗುತ್ತದೆ ಎಂದರು.
10ನೇ ತರಗತಿ ವಿದ್ಯಾರ್ಥಿನಿ ಪ್ರಿಯಾ ಮಾತನಾಡಿ, ಶಾಲಾ ಆವರಣದಲ್ಲಿ ನೆಟ್ಟಿರುವ ಸಸಿಗಳ ನಿರ್ವಹಣೆಯನ್ನು ಶಿಕ್ಷಕರು ಪ್ರತಿ ವಿದ್ಯಾರ್ಥಿಗೂ ವಹಿಸಿದ್ದಾರೆ. ಈ ದಿಸೆಯಲ್ಲಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನಿರ್ಮಿಸಲು ಸಾಧ್ಯ ಎನ್ನುವ ಗುರಿಯನ್ನು ಇಟ್ಟುಕೊಂಡು ಸಸಿಗಳನ್ನು ಪೋಷಣೆ ಮಾಡಲಾಗುತ್ತಿದ್ದು, ಖುಷಿ ತಂದು ಕೊಟ್ಟಿದೆ ಎಂದು ತಿಳಿಸಿದರು.
ಶಿಕ್ಷಕಿಯಾದ ಕಾರ್ಯದರ್ಶಿ: ಕಾರ್ಯಕ್ರಮದ ಬಳಿಕ ಶಾಲೆ ವಿದ್ಯಾರ್ಥಿಗಳನ್ನು ಒಂದೆಡೆ ಕೂರಿಸಿದ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ಸಾಮಾನ್ಯ ಜ್ಞಾನ, ವಿಷಯವಾರು ಆಸಕ್ತಿಗೆ ಸಂಬಂಧಿಸಿದಂತೆ ಸುಮಾರು 15 ನಿಮಿಷಗಳ ಕಾಲ ಮಕ್ಕಳ ಜ್ಞಾನ ಪರೀಕ್ಷಿಸಿ ಸಂವಹನ ನಡೆಸಿದರು.
ಜ್ಞಾನ ಹೆಚ್ಚಿಸಿಕೊಳ್ಳಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸರಸ್ವತಿ ಸಲಹೆ ನೀಡಿದರು.
ಗ್ರಾಪಂ ಅಧ್ಯಕ್ಷೆ ಉಮಾ, ಬಿಇಒ ಶಿವರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹದೇವ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಕಂದವೇಲು, ಚಿನ್ನಪ್ಪಯ್ಯ, ಪಿಡಿಒ ದೊರೆಯಾ, ಮುಖ್ಯ ಶಿಕ್ಷಕ ಮಹೇಶ್, ಇತರರು ಇದ್ದರು.