

ಬೆಂಗಳೂರು ಗ್ರಾಮಾಂತರ: ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ ರೋಗ ಹರಡದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರದಲ್ಲಿ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಮಲೇರಿಯಾ, ಡೆಂಘೆ ಹಾಗೂ ಚಿಕನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳ ಸಹಕಾರದೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಘೆ ಪ್ರಕರಣಗಳು ವರದಿಯಾಗುವ ಸ್ಥಳಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಕರೊನಾ 2ನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದು, ಇದರ ಮಧ್ಯೆ ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಕ್ರಮಕೈಗೊಳ್ಳಬೇಕು. ಎಲ್ಲ ಸರ್ಕಾರಿ ಕಚೇರಿಗಳ ಆವರಣದಲ್ಲಿ ಸ್ವಚ್ಛತೆ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಕಾರ್ಮಿಕರು ಹಂತ ಹಂತವಾಗಿ ಜಿಲ್ಲೆಗೆ ಆಗಮಿಸಲಿದ್ದು, ಕಾರ್ಮಿಕ ಇಲಾಖೆ ಅಧಿಕಾರಿಗಳು ಅಂತಹ ಕಾರ್ಮಿಕರನ್ನು ಗುರುತಿಸಿ ಅವರ ಆರೋಗ್ಯ ತಪಾಸಣೆ ಮಾಡಬೇಕು ಹಾಗೂ ರೋಗದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಾಗೃತಿ ಮೂಡಿಸಿ ರೋಗ ಹರಡದಂತೆ ತಡೆಗಟ್ಟಬೇಕು ಎಂದರು.
ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು ಮಳೆಗಾಲ ಪ್ರಾರಂಭವಾಗಿದ್ದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕು ಹಾಗೂ ನಿಂತ ನೀರಿನಲ್ಲಿ ಸೊಳ್ಳೆಗಳು ಹೆಚ್ಚಾಗಿ ಉತ್ಪತ್ತಿಯಾಗುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆ ಕೂಡಲೇ ಇದರ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದರು.
ಶಾಲೆಗಳ ಬಗ್ಗೆ ಎಚ್ಚರ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಮಾತನಾಡಿ, ಇನ್ನು ಕೆಲವು ದಿನಗಳಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, ಶಾಲೆಯ ಸುತ್ತಮುತ್ತ ಸ್ವಚ್ಛತೆಗೆ ಗಮನ ಹರಿಸಬೇಕು ಎಂದರು.
ಮಲೇರಿಯಾ, ಡೆಂಘೆ ಹಾಗೂ ಚಿಕೂನ್ ಗುನ್ಯಾದಂತಹ ರೋಗ ಹರಡುವ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಚಟುವಟಿಕೆ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಸೋಂಕು ತಗಲುವ ಸಾಧ್ಯತೆ ಹೆಚ್ಚಿರುತ್ತದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ವೇಳೆ ಅರಿವು ಮೂಡಿಸಬೇಕು ಎಂದರು.
ಹಿರಿಯ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್ ಮತ್ತಿತರಿದ್ದರು.