

ಬಾಗಲಕೋಟೆ:ಸೊಳ್ಳೆಯ ಕಡಿತದಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಘೆ, ಚಿಕೂನಗುನ್ಯಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಟಿ.ಭೂಬಾಲನ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಭನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೀಟಜನ್ಯ ರೋಗಗಳ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿರ್ವಹಣೆ ಕುರಿತು ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಯಾಗುವದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳ ಸಹಕಾರ ಪಡೆದುಕೊಳ್ಳಲು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ವರ್ಷ ಹಾಗೂ ಪ್ರಸಕ್ತ ಜನವರಿಯಿಂದ ಇಲ್ಲಿವರೆಗೆ ತಲಾ ಒಂದು ಮಲೇರಿಯಾ ಪ್ರಕರಣ ಕಂಡು ಬಂದಿವೆ. ೯ ಆನೆಕಾಲು ರೋಗದ ಪ್ರಕರಣಗಳು ದಾಖಲಾಗಿವೆ. ಮಲೇರಿಯಾ ನಿಯಂತ್ರಣಕ್ಕೆ ಜ್ವರ ಪೀಡಿತ ೨೪೯೩೮೬ ರೋಗಿಗಳ ರಕ್ತ ಲೇಪನ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಜಿಲ್ಲೆಯಲ್ಲಿ ೭೨ ಡೆಂಘೆ ಮತ್ತು ೨೩ ಚಿಕೂನಗುನ್ಯಾ ಪ್ರಕರಣಗಳು ಖಚಿತ ಪಟ್ಟ ಕಂಡುಬಂದಿದ್ದು, ಈ ಭಾಗದ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಮನೆ ಮನೆ ಭೇಟಿ ನೀಡಿ ನೀರು ಸಂಗ್ರಹಿಸುವ ತೊಟ್ಟಿಗಳನ್ನು ಪರೀಕ್ಷಿಸಿ ಲಾರ್ವಾ ಸಮೀಕ್ಷೆ ಮತ್ತು ಲಾರ್ವಾ ಉತ್ಪತ್ತಿ ತಾಣಗಳನ್ನು ನಿರ್ಮೂಲನೆಗೊಳಿಸುವ ಚಟುವಟಿಕೆಗಳು ನಿರಂತರವಾಗಿ ನಡೆಸಲು ಸೂಚಿಸಿದರು.
ಪ್ರಸಕ್ತ ಮಾಹೆಯಲ್ಲಿಯೂ ಮಳೆಯಾಗುತ್ತಿದ್ದು, ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿ ಮಲೇರಿಯಾ, ರೋಗದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಸೊಳ್ಳೆಗಳನ್ನು ನಾಶಮಾಡಲು ಕೀಟನಾಶಕ ಸಿಂಪಡಿಸಿ ದಿನನಿತ್ಯ ಸೊಳ್ಳೆ ಪರದೆಯನ್ನು ಉಪಯೋಗಿಸುವದರಿಂದ ಮಾರಕ ರೋಗಗಳಿಂದ ರಕ್ಷಣೆ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಆಯ್ದ ಪಂಚಾಯಿತಿಗಳಲ್ಲಿ ಜನರಲ್ಲಿ ಆರೋಗ್ಯ ಶಿಕ್ಷಣ ನೀಡುವುದು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಮನವರಿಕೆ ಮೂಡಿಸುವುದು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ, ಡೆಂಘೆ, ಚಿಕೂನಗುನ್ಯಾ ರೋಗ ನಿಯಂತ್ರಣಗಳ ಬಗ್ಗೆ ಮಾಹಿತಿ ನೀಡಿ ಅವುಗಳ ಅನುಸರಿಸಲು ಉತ್ತೇಜಿಸುವ ಕೆಲಸವಾಗಬೇಕು ಎಂದರು.
ಮನೆಯ ಒಳಗಡೆ ಗೋಡೆ, ಬಾಗಿಲುಗಳ ಮೇಲೆ ಕೀಟನಾಶಕಗಳನ್ನು ಸಿಂಪಡಿಸುವದರಿಂದ ಸೊಳ್ಳೆ ಸಾಯುತ್ತವೆ. ಹಾಗೂ ರೋಗ ತಡೆಗಟ್ಟಲು ಸಾಧ್ಯ. ಕೀಟ ನಾಶಕ ಸಿಂಪಡಣಾ ಕಾರ್ಯಕರ್ತರು ನಿಮ್ಮ ಮನೆಗೆ ಬಂದಾಗ ತಪ್ಪದೇ ಎಲ್ಲಾ ಕೋಣೆಗಳಿಗೆ ಕೀಟನಾಶಕ ಸಿಂಪಡಣೆ ಮಾಡಿಸಬೇಕು. ಸೊಳ್ಳೆ ಪರದೆ ದಿನನಿತ್ಯ ಉಪಯೋಗಿಸಿ, ಸೊಳ್ಳೆ ಕಡಿತದಿಂದ ಹರಡುವ ರೋಗಗಳಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಹಗಲು ಹೊತ್ತಿನಲ್ಲಿ ಸಹ ಮನೆಯಲ್ಲಿ ಮಲಗಿರುವಾಗ ಮಕ್ಕಳು, ಗರ್ಭಿಣಿಯರು, ವಯೋವೃದ್ಧರು ಹಾಗೂ ರೋಗಿಗಳು ಕಡ್ಡಾಯವಾಗಿ ಸೊಳ್ಳೆ ಪರದೆ ಉಯೋಗಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹಾಗೂ ರೇಬಿಸ್ ತಡೆಗಟ್ಟುವ ಕುರಿತ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಅವರು ಪಿಪಿಟಿ ಮೂಲಕ ಸಾಂಕ್ರಾಮಿಕ ರೋಗ ತಡೆಗಟ್ಟಲು ಹಾಕಿಕೊಂಡ ಕ್ರಮ ಹಾಗೂ ನಿಯಂತ್ರಣ ಕುರಿತು ವಿವರವಾದ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.