ಸಾಂಸ್ಕೃತಿಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ

06rajesh9
Published on

ಚಾಮರಾಜನಗರ: ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ನೀಡುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್ ಸಲಹೆ ನೀಡಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ನಡೆಯುವ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇದು ಅತ್ಯಂತ ಸಹಕಾರಿಯಾಗಲಿದೆ. ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣ ಅತ್ಯಂತ ಸಹಕಾರಿಯಾಗಿದ್ದು, ಅದರಂತೆ ಪಠ್ಯೇತರ ಚಟುವಟಿಕೆಗಳು ಕೂಡ ಸಹಕಾರಿಯಾಗಿದೆ. ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸೃಜನಶೀಲತೆಯನ್ನು ಬೆಳೆಸಲು ಅನುಕೂಲವಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಉನ್ನತಹುದ್ದೆಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳ ಅನಾವರಣಕ್ಕೆ ಇಂದೊಂದು ಬಹುದೊಡ್ಡ ಅವಕಾಶವಾಗಿದೆ. ಈ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಯೊಬ್ಬರು ಪಸರಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಹೆಚ್ಚಿನ ಅವಕಾಶಗಳನ್ನು ನೀಡಬೇಕಾಗಿದೆ. ಮಕ್ಕಳಲ್ಲಿ ಎಲ್ಲಾ ವಿಧವಾದ ಅಭಿರುಚಿಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಅತ್ಯಂತ ಸಹಕಾರಿಯಾಗಿದೆ ಎಂದು ಹೇಳಿದರು.

ಜೆಎಸ್‌ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಶಿಕ್ಷಣ ಪಡೆಯಲು ಇದು ಸಹಕಾರಿಯಾಗಲಿದೆ. ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರು ಭಾಗವಹಿಸುವ ಮೂಲಕ ಸಧೃಢ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಸಚಿವ ಲೋಕನಾಥ್, ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ದೇವರಾಜ್‌ಮೂರ್ತಿ, ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಜಮುನಾ, ಜೆಎಸ್‌ಎಸ್ ಬಿ,ಎಡ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಸವಣ್ಣ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net