ಸಾಗರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಾಣ: ಶಾಸಕ ಹರತಾಳು ಹಾಲಪ್ಪ

WEB 3333
Published on

ಸಾಗರ: ತಾಲೂಕಿನ ಜನತೆಗೆ ಒಂದೇ ಸೂರಿನಡಿ ಎಲ್ಲ ಇಲಾಖೆಗಳ ಸೇವೆ ಒದಗಿಸುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು ತಾಲೂಕು ಕಚೇರಿ ಆವರಣದಲ್ಲಿ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ತಹಸೀಲ್ದಾರ್ ಕಚೇರಿ ಆವರಣದಲ್ಲಿ ನಿರ್ಮಿಸುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಿದ ಅವರು, ಸಬ್ ರಿಜಿಸ್ಟ್ರಾರ್, ಸರ್ವೇ, ಅಬಕಾರಿ ಸೇರಿದಂತೆ ಕಂದಾಯಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಒಂದೆ ಕಡೆ ಇರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.

2018ರಿಂದ ಸಬ್ ರಿಜಿಸ್ಟ್ರಾರ್ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರು ಸಬ್ ರಿಜಿಸ್ಟ್ರಾರ್ ಕಚೇರಿ ಹುಡುಕಿಕೊಂಡು ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಪ್ಪಿಸಲು ತಹಸೀಲ್ದಾರ್ ಕಚೇರಿ ಹಿಂಭಾಗ ಜಾಗ ಗುರುತಿಸಲಾಗಿದೆ. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನೆಲಮಾಳಿಗೆ ಸೇರಿ ಲಿಫ್ಟ್ ಸಹಿತ ಮೂರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.

ಈ ವರ್ಷ 150 ದೇವಸ್ಥಾನಕ್ಕೆ 26 ಕೋಟಿ ರೂ.ಗೂ ಹೆಚ್ಚಿನ ಅನುದಾನ ನೀಡಲಾಗಿದೆ. 2 ಲಕ್ಷ ರೂ.ನಿಂದ 25 ಲಕ್ಷ ರೂ. ವರೆಗೂ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. ಇದರಲ್ಲಿ ದೇವಸ್ಥಾನದ ಸಮುದಾಯ ಭವನ ಸಹ ಸೇರಿದೆ. ಕೆಲವು ದೇವಸ್ಥಾನ ಮತ್ತು ಹೊಂದಿಕೊಂಡಂತೆ ಇರುವ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ವರೆಗೂ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗಿದೆ. ಸರ್ಕಾರದ ಯೋಜನೆಗಳು ನಿಗದಿತ ವೇಳೆಯಲ್ಲಿ ಕಾರ್ಯರೂಪಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net