ಸಾಮಾಜಿಕ ಅರಿವು ಮೂಡಿಸುವ ಎನ್‌ಎಸ್‌ಎಸ್

6 gkp 7
Published on

ಗೋಣಿಕೊಪ್ಪಲು: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಕದ ಉದ್ಘಾಟನೆಯನ್ನು ಕಾವೇರಿ ಕಾಲೇಜು ಚಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನೆರವೇರಿಸಲಾಯಿತು.

ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪಂಡ ಸುಗುಣ ಮುತ್ತಣ್ಣ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ನಾಯಕರಿಗೆ ಬ್ಯಾಡ್ಜ್ ವಿತರಿಸಿ ಮಾತನಾಡಿ, ಪದವಿ ಪೂರ್ವ ಶಿಕ್ಷಣದ ಹಂತ ವಿದ್ಯಾರ್ಥಿಗಳ ಪಾಲಿಗೆ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಶಿಕ್ಷಣದ ಕಡೆಗೆ ಹೆಚ್ಚು ಗಮನ ನೀಡಿದರೆ ತಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಕೆ.ಪಿ.ಅಚ್ಚಯ್ಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟಿಸಿ ಮಾತನಾಡಿ, ಸೇವೆಯ ಮೂಲಕ ಸಮಾಜಕ್ಕೆ ಅರಿವು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ. ಇದರಿಂದ ಸ್ವಯಂ ಸೇವಕರ ವ್ಯಕ್ತಿತ್ವ ವಿಕಸನವಾಗುವುದರ ಜತೆಗೆ ಸಮಾಜ ಸೇವೆಯ ಪ್ರಜ್ಞೆ ಜಾಗೃತಗೊಳ್ಳುತ್ತದೆ ಎಂದು ಹೇಳಿದರು.

ಸೇವೆ ಎನ್ನುವ ಪದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಅತ್ಯಂತ ಮಹತ್ವ ಪಡೆದಿದೆ. ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ ಎನಿಸಿಕೊಳ್ಳುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯು ಸಾಮಾಜಿಕ ಕಾಳಜಿ ಬಗ್ಗೆ ಅರಿವು ಮೂಡಿಸುವುದರ ಜತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಸ್.ಆರ್.ಸಾನಿಯ, ಸಿ.ಜೆ.ಶಮ್ನ ಶರೀನ್ ಹಾಗೂ ರಾಜ್ಯ ಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಬಿ.ಬಿ.ಪಂಚಮಿ ಅವರನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲ ಎಸ್.ಎಸ್.ಮಾದಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಡಾ.ಲೆಫ್ಟಿನೆಂಟ್ ಎಂ.ಆರ್.ಆಕ್ರಂ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಪ್ರ ನೀಲಮ್ಮ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಸಿ.ಎ.ಯತೀನ್ ಬೋಪಯ್ಯ, ಎಚ್.ಎನ್.ಜನನಿ, ಪಂಚಮಿ, ಎಂ.ಡಿ.ಚಿರಾಗ್ ಚಿಣ್ಣಪ್ಪ, ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಪದವಿ ಕಾಲೇಜು ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಿಯಪ್ಪ, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net