

ಬಾಗಲಕೋಟೆ: ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳ ಆರೋಗ್ಯಾಧಿಕಾರಿಗಳು ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ನೂತನ ಸಭಾ ಭವನದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕುಂದು ಕೊರತೆಗಳ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಇದ್ದರೂ ಪ್ರಯೋಜನಕ್ಕೆ ಬರಲಿಲ್ಲ ಎಂಬ ಕೂಗು ಸಾರ್ವಜನಿಕರಿಂದ ಬಾರದಂತೆ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ, ಉಪಕರಣ ಸೇರಿದಂತೆ ಯಾವುದೇ ವ್ಯವಸ್ಥೆ ಕೊರತೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾ ಆರೋಗ್ಯ ಅಧಿಕಾರಿಯ ಜವಾಬ್ದಾರಿಯಾಗಿದೆ ಎಂದರು.
ಸಾರ್ವಜನಿಕರು ದೂರು ಹಿನ್ನಲೆಯಲ್ಲಿ ಇಳಕಲ್ಲ, ಹುನಗುಂದ ಸಾರ್ವಜನಿಕರ ಆಸ್ಪತ್ರೆಗಳಿಗೆ ಭೇಟಿ ನೀಡಬೇಕಾಯಿತು. ಸುಸಜ್ಜಿತ ಆಸ್ಪತ್ರೆ ಇದ್ದರು ಈ ವರೆಗೆ ಒಂದು ಹೆರಿಗೆ ಆಗಿಲ್ಲ ಎಂದರೆ ಹೇಗೆ? ಮೇಲ್ನೂಟಕ್ಕೆ ಹೆರಿಗೆ ಕಡಿಮೆ ಇವೆ ಅಂತ ವರದಿ ನೀಡುವುದು ತರವಲ್ಲ. ಬಡವರು, ಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಖಾಸಗಿ ಆಸ್ಪತ್ರೆಗಳೇ ಮುಖ್ಯವಾಗಿದ್ದರೇ ಸರ್ಕಾರಿ ಆಸ್ಪತ್ರೆಗಳನ್ನು ಏಕೆ ಸ್ಥಾಪಿಸಬೇಕು ಅಂತ ಗರಂ ಆಗಿ ಪ್ರಶ್ನಿಸಿದರು.
ಇನ್ನು ಜಿಲ್ಲಾಧಿಕಾರಿ ಕೂಡಾ ನಿಯಮಿತ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಪರಿಸ್ಥಿತಿ ಅವಲೋಕನ ನಡೆಸಬೇಕು. ಔಷಧಿ ವಿತರಣೆ, ನರ್ಸಿಂಗ್ ಸಿಬ್ಬಂದಿ, ಯಂತ್ರೋಪಕರಣಗಳ ಇರುವ ಕುರಿತು ಪರಿಶೀಲಿಸಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ 65 ಕೆರೆಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಹೀಗೆ ಆದರೇ ಹೇಗೆ? ನಮ್ಮ ಮುಂದಿನ ಪೀಳಿಗೆ ಜನರಿಗೆ ಕೆರೆ, ಕಟ್ಟೆ, ಬಾವಿ ಸೇರಿದಂತೆ ಜಲ ಸಂಪನ್ಮೂಲ ಉಳಸಿಕೊಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಕೆರೆ ಒತ್ತುವರಿ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಪ್ರಭಾವಿ ವ್ಯಕ್ತಿಯಾಗಿದ್ದರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಆಯಾ ತಾಲೂಕಿನ ತಹಸೀಲ್ದಾರಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾತನಾಡಿ, ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಕೆರೆ ಒತ್ತುವರಿಗೆ ಸಂಬಂಸಿದಂತೆ ಮುಂಬರುವ 2 ತಿಂಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಸಣ್ಣ ನೀರಾವರಿ ಇಲಾಖೆಗೆ ಕೆರೆಯ ಸುತ್ತ ಸಂರಕ್ಷಣಾ ಟ್ರೆಂಚ್ ನಿರ್ಮಿಸುವಂತೆ
ಸುವಂತೆ ಸೂಚಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಸಿಇಒ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಜಯಪ್ರಕಾಶ ಹಕ್ಕರಕಿ, ಲೋಕಾಯುಕ್ತ ಪೊಲೀಸ್ ವರಿಷ್ಠಾಕಾರಿ ಅನಿತಾ ಹದ್ದೆಣ್ಣನವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಕಾರಿಗಳು ಇದ್ದರು.