

ವಿಜಯಪುರ: ಸರ್ಕಾರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಬೇಕು. ಗೃಹಲಕ್ಷ್ಮಿಯಂಥ ಯೋಜನೆಗಳನ್ನು ಜನರನ್ನು ತಲುಪಲು ಬೇಕಾದ ಕ್ರಮ ಕೈಗೊಳ್ಳಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಸ್ಥಳೀಯ ಮತ್ತಿತರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಬೇಕೆಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಕುಡಿಯುವ ನೀರು ಮತ್ತು ಗೃಹ ಲಕ್ಷ್ಮಿ ಯೋಜನೆಯ ಪೂರ್ವ ಸಿದ್ಧತೆಗೆ ಸಂಬಂಧಿಸಿದ ವಿಡಿಯೋ ಸಂವಾದದಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರು ಪೂರೈಕೆ ಕಾರ್ಯದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು. ಲಭ್ಯವಿರುವ ಎಲ್ಲ ಜಲಮೂಲಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ಜಲ ಮೂಲಗಳನ್ನು ಪ್ರತಿ ತಿಂಗಳು ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ಪರೀಕ್ಷೆ ಮಾಡಿಸಿ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಪ್ರತಿ ತಿಂಗಳು ಆರ್‌ಡಬ್ಲೂಎಸ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಎಲ್ಲ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಂದ ಜಲಮೂಲಗಳು ಸ್ವಚ್ಛತೆ ಇರುವ ಕುರಿತು ದೃಢೀಕೃತ ವರದಿ ತಯಾರಿಸಿ ಪ್ರತಿ ತಿಂಗಳು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ಲೋಪ ಸಹಿಸುವುದಿಲ್ಲ. ಒಂದು ವೇಳೆ ಲೋಪ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿರುವ ಆರ್‌ಒ ಪ್ಲಾಂಟ್ ಗಳು ಕಡ್ಡಾಯವಾಗಿ ಸುಸ್ಥಿತಿಯಲ್ಲಿರುವಂತೆ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಮತ್ತು ಗ್ರಾಪಂನೊಂದಿಗೆ ಸಮನ್ವಯ ಸಾಧಿಸಿಕೊಂಡು ನಿರ್ವಹಣೆ ಮಾಡಬೇಕು. ಚಿಕ್ಕ-ಪುಟ್ಟ ದುರಸ್ಥಿಗಳಿದ್ದಲ್ಲಿ ಸಂಬಂಧಿಸಿದ ಏಜೆನ್ಸಿಯವರಿಂದ ದುರಸ್ಥಿ ಮಾಡಿಸಬೇಕು. ಒಂದು ವೇಳೆ ಸಂಬಂಧಿಸಿದ ಏಜೆನ್ಸಿಯವರು ಸ್ಪಂದಿಸದಿದ್ದರೆ ಅವರಿಗೆ ನೋಟಿಸ್ ಜಾರಿ ಮಾಡಿ, ನೋಟಿಸ್ ನೀಡಿದರೂ ಸಹ ಅವರು ದುರಸ್ಥಿ ಮಾಡಲು ಹಿಂದೇಟು ಹಾಕಿದರೆ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲ ದೂರುಗಳು, ಸಮಸ್ಯೆಗಳು ಗ್ರಾಪಂಗೆ ಸಂಬಂಧಪಟ್ಟಿರುತ್ತದೆ. ಹೀಗಾಗಿ ಗ್ರಾಪಂ ಅಧಿಕಾರಿಗಳು ಈ ವಿಷಯವನ್ನು ಮನದಟ್ಟು ಮಾಡಿಕೊಂಡು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿಕೊಂಡು ಸಮಸ್ಯೆ ಬಗೆಹರಿಸಬೇಕು. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಆರ್‌ಡಬ್ಲೂಎಸ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮಗಳಿಗೆ ಭೇಟಿ ನೀಡಿ ಮೇಲುಸ್ತುವಾರಿ ನಡೆಸುವಂತೆ ಅವರು ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯನ್ನು ಆ.30ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮವನ್ನು ಎಲ್ಲ ಗ್ರಾಮ ಪಂಚಾಯಿತಿ ಹಂತದಲ್ಲಿ ಸಾರ್ವಜನಿಕರಿಗೆ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲು ಸರ್ಕಾರ ನಿರ್ದೇಶಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಪಂ ಜಾಗ, ಸಮುದಾಯ ಭವನ, ಬಯಲು ಜಾಗದಲ್ಲಿ ವೇದಿಕೆ ಸಿದ್ದಪಡಿಸಿ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜಿಸಬೇಕು. ಯಾವುದೇ ಕಾರಣಕ್ಕೂ ಈ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಬಳಸಿಕೊಳ್ಳಬಾರದು ಮತ್ತು ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿದಂತೆ ಸೂಚಿಸಿದ ಅವರು, ಕಾರ್ಯಕ್ರಮದ ಸ್ಥಳದಲ್ಲಿ ದ್ವಿಮುಖ ಸಂವಹನ ವ್ಯವಸ್ಥೆ, ಪ್ರೊಜೆಕ್ಟರ್, ಸ್ಪೀಕರ್, ಆಡಿಯೋ ವ್ಯವಸ್ಥೆ, ಕುಡಿಯುವ ನೀರು, ನೆರಳು ಮತ್ತು ಅಲ್ಪೋಪಹಾರದ ವ್ಯವಸ್ಥೆ ಮಾಡಿಕೊಳ್ಳಬೇಕು. ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ಮಾಡಿ ಕನಿಷ್ಠ 2000 ಜನರು ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಜಿಲ್ಲೆಯಲ್ಲಿ ಕೈಗೊಂಡ ಬೆಂಚ್ ಅಭಿಯಾನಕ್ಕೆ ಅಭೂತ ಪೂರ್ವ ಬೆಂಬಲ ಸೂಚಿಸಿದ ಎಲ್ಲ ಅಧಿಕಾರಿಗಳಿಗೆ ಶಹಬ್ಬಾಷಗಿರಿ ನೀಡಿದರು. ಕೆಲವೇ ದಿನದಲ್ಲಿ 740 ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಕುಳಿತುಕೊಳ್ಳಲು ಬೆಂಚ್ ಮತ್ತು ಟೇಬಲ್ ನೀಡಿರುವುದು ತುಂಬಾ ಸಂತಸ ತಂದಿದೆ ಎಂದರು. ತಿಕೋಟಾ, ಬಬಲೇಶ್ವರ ಮತ್ತು ಚಡಚಣ ತಾಲೂಕಿನಲ್ಲಿ ಅತೀ ಹೆಚ್ಚು ಅಂಗನವಾಡಿಗಳಲ್ಲಿ ಕುರ್ಚಿ ಟೇಬಲ್ ವಿತರಣೆ ಮಾಡಲಾಗಿದ್ದು, ಮುಂದಿನ ದಿನದಲ್ಲಿ ಉಳಿದ ಎಲ್ಲ ಅಂಗನವಾಡಿಗಳಿಗೂ ಸಾಮಗ್ರಿ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಈ ಬೆಂಚ್ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಮತ್ತು ಸದಸ್ಯರು ಎಲ್ಲರೂ ತುಂಬಾ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ ಎಂದರು.
ಜಿಪಂ ಉಪಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ ಮತ್ತಿತರರಿದ್ದರು.