

ಶಿರಸಿ: ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸಾಕಷ್ಟು ಶ್ರಮವಹಿಸಿದರೂ ಸಾರ್ವಜನಿಕರ ಸಹಕಾರ ಇಲ್ಲದಿದ್ದರೆ ಕಾಡುಗಳ್ಳತನ ತಡೆಯಲು ಕಷ್ಟಸಾಧ್ಯ ಎಂದು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.
ಝುೂ ಸರ್ಕಲ್ ಬಳಿಯಿರುವ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ರಕ್ಷಣೆಯ ಜವಾಬ್ದಾರಿಯನ್ನು ಸಾರ್ವಜನಿಕರು ಅರಿಯುವ ಅಗತ್ಯವಿದೆ. ಖಾಲಿಯಾಗುತ್ತಿರುವ ಅರಣ್ಯ ಸಂಪತ್ತನ್ನು ಉಳಿಸಲು ಅರಣ್ಯ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಸಿಎಫ್ ಯತೀಶ ಕುಮಾರ ಮಾತನಾಡಿ, ನೈಸರ್ಗಿಕ ಸಂಪತ್ತು ರಕ್ಷಣೆಯಲ್ಲಿ ಅರಣ್ಯ ಇಲಾಖೆ ಶ್ರಮಿಸುತ್ತಿದೆ. ಇಲ್ಲಿನ ಸಿಬ್ಬಂದಿ ಹೆಚ್ಚು ಶ್ರದ್ಧೆಯಿಂದ ಕೆಲಸ ಮಾಡುತ್ತಿರುವ ಕಾರಣ ಅರಣ್ಯ ಸಂಪತ್ತು ಉಳಿದುಕೊಂಡಿದೆ ಎಂದರು.
ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ಡಿಎಫ್ಒಗಳಾದ ಎಸ್.ಜಿ.ಹೆಗಡೆ, ಎಸ್.ಪಿ.ಹೆಗಡೆ ಇತರರಿದ್ದರು.