ಚಾಮರಾಜನಗರ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಅರಿವು ಶೈಕ್ಷಣಿಕ ಸಾಲ ಯೋಜನೆ, ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಹಾಗೂ ಕನಿಷ್ಠ 2 ಎಕರೆ ಜಮೀನು ಹೊಂದಿರುವವರು ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯು 18 ರಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ 3.50 ಲಕ್ಷ ರೂ. ಇರಬೇಕು. ಸ್ವಾವಲಂಬಿ ಸಾರಥಿ ಯೋಜನೆಗೆ 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಾಗಿದ್ದಲ್ಲಿ 98 ಸಾವಿರ ರೂ. ಮತ್ತು ನಗರ ಪ್ರದೇಶದವರಾಗಿದ್ದಲ್ಲಿ 1,20,000 ರೂ. ಮಿತಿಯೊಳಗಿರಬೇಕು.
ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33ರಷ್ಟು, ವಿಕಲಚೇತನರಿಗೆ ಶೇ. 5ರಷ್ಟು, ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಮೀಸಲಾತಿ ಇರಿಸಲಾಗಿದೆ. 2023-24 ಮತ್ತು 2024-25ನೇ ಸಾಲಿನ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ.
ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‌ಸೈಟ್ ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ. 080-22252555 ಪಡೆಯಬಹುದು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ಸಂ. 08226-223587 ಸಂಪರ್ಕಿಸುವಂತೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.