ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Published on

ಹಾಸನ : ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಶಾಸಕ ಸಿ.ಟಿ. ರವಿ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಿಂದ ಸಿ.ಟಿ. ರವಿ ಅವರ ಅಣಕು ಶವಯಾತ್ರೆ ನಡೆಸಿ ಎನ್ ಆರ್ ವೃತ್ತದ ಬಳಿ ಸಿ.ಟಿ. ರವಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಎಚ್.ಕೆ. ಜವರೇಗೌಡ ಮಾತನಾಡಿ, ಸಿ.ಟಿ. ರವಿ ತಮ್ಮ ನಾಲಿಗೆ ಹರಿಬಿಟ್ಟು, ಸಮಾನತೆಯ ಹರಿಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವುದು ಖಂಡನೀಯ. ಚಿಕ್ಕ ಮಗಳೂರಿನಲ್ಲಿ ಸಿ.ಟಿ. ರವಿ ಅವರಿಗೆ ಅಯೋಗ್ಯ, ಲೂಟಿ ರವಿ, ಓಟಿ ರವಿ ಎಂಬ ಅನೇಕ ಹೆಸರುಗಳು ಇವೆ. ಇಂತಹ ಹೆಸರು ಪಡೆದಿರುವ ರವಿಗೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

13 ಬಾರಿ ಬಜೆಟ್ ಮಂಡನೆ ಮಾಡಿರುವ ಮುತ್ಸದ್ದಿ ರಾಜಕಾರಣಿ ಬಗ್ಗೆ ತುಚ್ಛ ಪದ ಬಳಸಿರುವುದು ಸಿ.ಟಿ. ರವಿಯ ಸಂಸ್ಕೃತಿಯನ್ನು ಸೂಚಿಸುತ್ತದೆ. ಸಿ.ಟಿ. ರವಿ ಅವರ ಇಂಥ ನಡವಳಿಕೆ ವಿರುದ್ಧ ಅವರ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್.ಕೆ. ಮಹೇಶ್, ದೇವರಾಜೇಗೌಡ, ಬನವಾಸೆ ರಂಗಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಂಜಿತ್ ಗೊರೂರು, ರವೀಶ್ ಬಸವಪುರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net