ಸಿಎಂ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಿ, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚನೆ

dc
Published on

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ ಮುಂದಿನ ವಾರ ನಿಗದಿಯಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮಾಹಿತಿ ನೀಡಿದರು.

ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಆಸ್ಪತ್ರೆ ನಿರ್ಮಾಣದಲ್ಲಿ ಉಳಿದಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ವೈದ್ಯಕೀಯ ಸಚಿವ ಡಾ. ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕರೊನಾ ಮಾರ್ಗಸೂಚಿಯದ ಕಡ್ಡಾಯ ಪಾಲನೆಯೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಕುಡಿಯುವ ನೀರು, ಶೌಚಗೃಹ ವ್ಯವಸ್ಥೆ ಸೇರಿ ಅಗತ್ಯ ಮೂಲಸೌಕರ್ಯಗಳನ್ನು ತಾತ್ಕಾಲಿಕ ಆಸ್ಪತ್ರೆಯಲ್ಲಿ ಕಲ್ಪಿಸಬೇಕು. ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲಿನ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಮುಖ್ಯಮಂತ್ರಿ ಅವರು ಬರುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಸೇರುವ ಸಾಧ್ಯತೆ ಇದೆ. ವೇದಿಕೆಯಲ್ಲಿ ನಿರ್ದಿಷ್ಟ ಸಂಖ್ಯೆಯ ಜನರಿಗೆ ಮಾತ್ರವೇ ಅವಕಾಶ ಕಲ್ಪಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಡಿವೈಎಸ್ಪಿ ಟಿ. ರಂಗಪ್ಪ, ತಹಸೀಲ್ದಾರ್ ಶಿವರಾಜ್, ಹೊಸಕೋಟೆ ತಹಸೀಲ್ದಾರ್ ಗೀತಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಧರ್ಮೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net