

ಗುಂಡ್ಲುಪೇಟೆ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶುಕ್ರವಾರ ಭೇಟಿ ಮಾಡಿದ ತಾಲೂಕಿನ ತೆರಕಣಾಂಬಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು ಪ್ರಥಮ ದರ್ಜೆ ಕಾಲೇಜು ಸ್ಥಳಾಂತರ ಮಾಡದಂತೆ ಮನವಿ ಸಲ್ಲಿಸಿದರು.
ಕಳೆದ ಒಂದು ತಿಂಗಳಿನಿಂದ ಕಾಲೇಜು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ರೈತ ಸಂಘಟನೆಯ ಪದಾಧಿಕಾರಿಗಳು, ಬೆಂಗಳೂರಿಗೆ ತೆರಳಿ ಅಲ್ಲಿನ ಮೌರ್ಯ ಸರ್ಕಲ್‌ನಲ್ಲಿ ಕೆಲಕಾಲ ರಸ್ತೆ ಸಂಚಾರ ತಡೆ ನಡೆಸಿ ಸರ್ಕಾರದ ಗಮನಸೆಳೆದರು. ನಂತರ ವಿಷಯ ತಿಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಗೃಹಕಚೇರಿಗೆ ಹಸಿರು ಸೇನೆ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಪ್ರಭು, ಬಸವಣ್ಣ, ಶಾಂತಮಲ್ಲಪ್ಪ, ವಿದ್ಯಾರ್ಥಿಗಳಾದ ರಕ್ಷಿತಾ, ತೇಜಸ್ವಿನಿ ಅವರನ್ನು ಕರೆಸಿಕೊಂಡು ಗ್ರಾಮದಲ್ಲಿ ಕಾಲೇಜು ಉಳಿಸುವ ಭರವಸೆ ನೀಡಿದರು.
ಗ್ರಾಮದಲ್ಲಿ 2014ರಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭವಾಗಿದ್ದು, ಕಳೆದ ವರ್ಷ ನೂತನ ಕಟ್ಟಡ ನಿರ್ಮಾಣವಾಗಿದೆ. ಆದರೆ, ವಿದ್ಯಾರ್ಥಿಗಳ ಕೊರತೆಯ ಕಾರಣದಿಂದ ಸರ್ಕಾರ ಬೆಳಗಾವಿ ಜಿಲ್ಲೆಗೆ ಸ್ಥಳಾಂತರಿಸಿ ಆದೇಶ ಹೊರಡಿಸಿದೆ. ಇದೇ ಕಾಲೇಜಿನಲ್ಲಿ ಕೌಶಲ ತರಬೇತಿ ಕೇಂದ್ರ ತೆರೆಯಲು ನಿರ್ಧರಿಸಲಾಗಿತ್ತು. ಇದರಿಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮೀಣ ಪ್ರದೇಶಗಳ ಹೆಣ್ಣು ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ. ಆದ್ದರಿಂದ ಗ್ರಾಮದಲ್ಲೇ ಕಾಲೇಜು ಉಳಿಸುವಂತೆ ಮನವಿ ಮಾಡಿದರು.