

ಮೈಸೂರು: ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಜೂ.10ರಂದು ತವರು ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ.
ಅಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಸಿಎಂ ಸಿದ್ದರಾಮಯ್ಯ, ಮಧ್ಯಾಹ್ನ 12.20ಕ್ಕೆ ಸುತ್ತೂರಿನ ಜೆಎಸ್‌ಎಸ್ ವಸತಿ ಶಾಲಾ ಮೈದಾನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ.
ಬಳಿಕ 12.35ಕ್ಕೆ ಬಿಳಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿರುವ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.45ಕ್ಕೆ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ. ಸಂಜೆ 4ಕ್ಕೆ ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ಬಳಿಕ ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಸ್ವಾಗತಕ್ಕೆ ತಯಾರಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತ ಕೋರಲು ಕಾಂಗ್ರೆಸ್ ಕಾರ್ಯಕರ್ತರು ತಯಾರಿ ಮಾಡಿಕೊಂಡಿದ್ದಾರೆ.
ಸುತ್ತೂರು ಗ್ರಾಮದ ಹೊರ ವಲಯದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿಯಲಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಬಿಳಿಗೆರೆ ಗ್ರಾಮಕ್ಕೆ ತೆರೆದ ಜೀಪಿನಲ್ಲಿ ಮೆರವಣಿಗೆ ಮೂಲಕ ಕರೆತರಲಾಗುವುದು. ಕಲಾ ತಂಡಗಳು ಸಾಥ್ ನೀಡಲಿದ್ದು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ 40ರಿಂದ 50 ಸಾವಿರ ಜನರು ಸೇರುವ ನಿರೀಕ್ಷೆ ಇದೆ.