ಸಿಎನ್‌ಸಿಯಿಂದ ಮಾನವ ಸರಪಳಿ ರಚನೆ

26 gkp .1
Published on

ಗೋಣಿಕೊಪ್ಪಲು: ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಟಿ.ಶೆಟ್ಟಿಗೇರಿಯಲ್ಲಿ ಸೋಮವಾರ ಮಾನವ ಸರಪಳಿ ಜನಜಾಗೃತಿ ಮೂಡಿಸಿತು.

ಧಾರಾಕಾರ ಮಳೆಯ ನಡುವೆ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ಟಿ.ಶೆಟ್ಟಿಗೇರಿ ಜಂಕ್ಷನ್‌ನಲ್ಲಿ ಮಾನವ ಸರಪಳಿ ನಿರ್ಮಿಸಿದ ಸದಸ್ಯರು, ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಿದರು.

ಎನ್.ಯು.ನಾಚಪ್ಪ ಮಾತನಾಡಿ, ಪ್ರಸ್ತುತ ಜನಗಣತಿ ಸಂದರ್ಭ ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಸೇರಿಸಿದರೆ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸಬಹುದು.

ಸರ್ಕಾರ ಕೊಡವ ಸಮುದಾಯದ ನಿರ್ದಿಷ್ಟ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಸೋಷಿಯಲ್ ಇಂಜಿನಿಯರಿಂಗ್ ಮೂಲಕ ಅವರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಉದ್ದೇಶಿತ ನೀತಿಗಳನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುತ್ತದೆ. ಕೊಡವ ಸಮುದಾಯದ ವಿಶಿಷ್ಟ ಗುರುತನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದರು. 2025-26ರ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮಸಂಜಾತ ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಅನ್ನು ಸೇರಿಸಲು ಕೇಂದ್ರ ಗೃಹ ಮಂತ್ರಾಲಯ ರಿಜಿಸ್ಟ್ರಾರ್ ಜನರಲ್ ಮತ್ತು ಭಾರತದ ಜನಗಣತಿ ಆಯೋಗ ನಮ್ಮ ಬೇಡಿಕೆಯನ್ನು ಪರಿಗಣಿಸಬೇಕೆಂದು ಒತ್ತಾಯಿಸಿದರು.

ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಅಳವಡಿಸಬೇಕೆಂದು ಒತ್ತಾಯಿಸಿ ಜೂ.2ರಂದು ಬೆಳಗ್ಗೆ 10.30 ಗಂಟೆಗೆ ಬಾಳೆಲೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದರು.

ಅಜ್ಜಮಾಡ ಸಾವಿತ್ರಿ, ಅಪ್ಪಚಂಗಡ ಮೋಟಯ್ಯ, ಚೊಟ್ಟೆಯಂಡಮಾಡ ಉದಯ, ಬೊಟ್ಟಂಗಡ ಗಿರೀಶ್, ಬಾಚರಣಿಯಂಡ ಚಿಪ್ಪಣ್ಣ, ಅಜ್ಜಿಕುಟ್ಟಿರ ಲೋಕೇಶ್, ಅಜ್ಜಮಾಡ ಚಿಮ್ಮ, ಚಟ್ಟಂಗಡ ರೇಣು ಮತ್ತಿತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net