ಚಾಮರಾಜನಗರ: ದೇಶದ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತ ಪ್ರಕರಣವನ್ನು ಖಂಡಿಸಿ ಪರಿಶಿಷ್ಟ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ಜಮಾಯಿಸಿದ ನೌಕರರು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮತ್ತು ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಮೌನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷೆ ಹಾಗೂ ಜಿಲ್ಲಾಧ್ಯಕ್ಷೆ ಡಾ.ಸಿ.ಎನ್.ರೇಣುಕಾದೇವಿ ಮಾತನಾಡಿ, ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮೇಲೆ ವಕೀಲರಾದ ರಾಕೇಶ್ ಕಿಶೋರ್ ಎಂಬುವವರು ಶೂ ಎಸೆದಿರುವುದು ಅತ್ಯಂತ ಖಂಡನೀಯ. ಇದು ದೇಶದ ಕಾನೂನು ಹಾಗೂ ಪ್ರತಿಯೊಬ್ಬ ಪ್ರಜೆಗೂ ಮಾಡಿದ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಕೀಲ ರಾಕೇಶ್ ಕಿಶೋರ್ ಅವರನ್ನು ಬಂಧಿಸಿ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಗ್ವಾಲಿಯರ್ ಹೈಕೋರ್ಟ್ ವಕೀಲ ಅನಿಲ್ ಮಿಶ್ರಾ ಅವರನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಶಿವಕುಮಾರ್, ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಿಂಗೇಗೌಡ, ಮಹೇಶ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಡಿ.ಮಹದೇವಯ್ಯ, ರವಿಕುಮಾರ್, ನಂಜುಂಡಸ್ವಾಮಿ, ಪುಟ್ಟಸ್ವಾಮಿ, ಜಯಶಂಕರ್, ನಟರಾಜ್, ನಂಜುಂಡಸ್ವಾಮಿ, ಸಿ.ಕೆ.ಸುಶೀಲಾ, ಜಯರಾಮು, ಮಹೇಶ್ ಹಾಗೂ ಇತರರು ಭಾಗವಹಿಸಿದ್ದರು.