ನಗರದಲ್ಲಿ ಪರ-ವಿರೋಧ ಪ್ರತಿಭಟನೆ
ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ವಿರುದ್ಧ ಆಕ್ರೋಶ:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಾಯಕ ಜನಾಂಗದ ಮುಖಂಡರನ್ನು ರಾಜಕೀಯವಾಗಿ ತುಳಿಯಲು ಮುಂದಾಗಿದ್ದಾರೆ. ಆದ್ದರಿಂದ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಯುವತಿಗೆ ನ್ಯಾಯ ಕೊಡಿಸುವ ನೆಪದಲ್ಲಿ ಯುವತಿಯನ್ನು ಬಚ್ಚಿಟ್ಟು ದಿನಕ್ಕೊಂದು ವಿಡಿಯೋವನ್ನು ಯುವತಿ ಕಡೆಯಿಂದ ಬಿಡುಗಡೆ ಮಾಡಿಸಿ, ರಾಜ್ಯದ ಜನರಲ್ಲಿ ರಮೇಶ್ ಜಾರಕಿಹೊಳಿ ಅವರ ಬಗ್ಗೆ ಕೆಟ್ಟದಾಗಿ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಮೇಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ಉದ್ದೇಶಪೂರ್ವಕವಾಗಿ ಷಡ್ಯಂತ್ರ ಮಾಡಿರುವ ಡಿ.ಕೆ. ಶಿವಕುಮಾರ್ ಐತಿಹಾಸಿಕ ಹಿನ್ನೆಲೆಯುಳ್ಳ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ನೈತಿಕತೆ ಕಳೆದುಕೊಂಡಿರುವುದರಿಂದ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಯುವತಿಯ ತಂದೆ, ತಾಯಿ ಮತ್ತು ಸಹೋದರ ಮಾಧ್ಯಮಗಳ ಮೂಲಕ ಹಾಗೂ ಎಸ್‌ಐಟಿ ಮುಂದೆ ನಮ್ಮ ಮಗಳನ್ನು ಡಿ.ಕೆ.ಶಿವಕುಮಾರ್ ಬಚ್ಚಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಈ ಸಿಡಿ ಪ್ರಕರಣಕ್ಕೆ ಮೂಲ ಸೂತ್ರಧಾರ ಡಿ.ಕೆ.ಶಿವಕುಮಾರ್ ಎಂದು ಹೇಳಿರುವುದರಿಂದ ಅವರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಾಯಕ ಯುವ ಸೇನೆ ಅಧ್ಯಕ್ಷ ದೇವರಾಜ್ ಟಿ.ಕಾಟೂರು, ಜಿಲ್ಲಾಧ್ಯಕ್ಷ ಉದ್ಬೂರು ಸೋಮಣ್ಣ, ರಾಜ್ಯ ಉಪಾಧ್ಯಕ್ಷ ಶಿವಕುಮಾರ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಸುತ್ತೂರು ಸುರೇಶ ನಾಯಕ ಇತರರಿದ್ದರು.