

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇರುವವರೆಗೂ ನಮಗೆ ಅಧಿಕಾರ ಸಿಗುವುದಿಲ್ಲ ಎಂದು ಪ್ರತಿಪಕ್ಷದವರು ಸಿದ್ದರಾಮಯ್ಯ ನಾಯಕತ್ವಕ್ಕೆ ಮಸಿ ಬಳಿದು ಅವರ ಬಗ್ಗೆ ಜನರ ಮನಸ್ಸಿನಲ್ಲಿ ಅನುಮಾನ ಹುಟ್ಟಿಸಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದರು.
ತಾಯೂರು ಗೇಟ್‌ನಲ್ಲಿ ಮಂಗಳವಾರ ವರುಣ ಕ್ಷೇತ್ರ ವ್ಯಾಪ್ತಿಯಲ್ಲಿ 501.81 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಸರ್ಕಾರ ಅಸ್ಥಿರಗೊಳಿಸಲು ಪ್ರತಿಪಕ್ಷ ನಡೆಸುತ್ತಿರುವ ಪ್ರಯತ್ನಕ್ಕೆ ರಾಜ್ಯದ ಜನತೆ ಅವಕಾಶ ನೀಡಬಾರದು ಎಂದರು.
ಸಿದ್ದರಾಮಯ್ಯ ಧ್ವನಿ ಅಡಗಿಸಿದರೆ ಎಲ್ಲ ಶೋಷಿತರು, ಮಹಿಳೆಯರು ಹಾಗೂ ಕಾರ್ಮಿಕರ ಧ್ವನಿ ಅಡಗಿಸಬಹುದು ಎಂದು ಪ್ರತಿಪಕ್ಷದವರು ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಅಂದರೆ ಒಂದು ಶಕ್ತಿ, ಅವರು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನು ಒಗ್ಗೂಡಿಸಿ ಸರ್ವರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಸಿದ್ದರಾಮಯ್ಯ ಮುಖಕ್ಕೆ ಮಸಿ ಬಳಿಯುವವರಿಗೆ ಜನರು ಮಾನ್ಯತೆ ನೀಡುವುದಿಲ್ಲ. ಕೆಲವರು ಊರು ಊರನ್ನೇ ತಮ್ಮದಾಗಿಸಿಕೊಂಡಿದ್ದಾರೆ. ಬಳ್ಳಾರಿ, ಶಿವಮೊಗ್ಗ, ಬೆಂಗಳೂರು, ಚಿಕ್ಕಮಗಳೂರು ಹಾಗೂ ಧಾರವಾಡವನ್ನು ಕೆಲವರು ತಮ್ಮದಾಗಿ ಮಾಡಿದ್ದಾರೆ. ಇಂಥವರು ಸಿದ್ದರಾಮಯ್ಯ ಪ್ರಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.