

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೀತಾ ಚಿದ್ರಿ ಅವರು ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿದರು.
ಪಕ್ಷ ಟಿಕೆಟ್ ನೀಡಿದರೆ ಜನಸೇವೆಗಾಗಿ ಬರುವ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ ಎಂದು ಅವರು ತಿಳಿಸಿದರು.
ಎರಡು ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಜಿಲ್ಲಾ ಪಂಚಾಯಿತಿ ಸದಸ್ಯೆ, ಅಧ್ಯಕ್ಷೆಯಾಗಿ, ಪಕ್ಷದ ಬೀದರ್ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದೇನೆ. ಬೀದರ್ ದಕ್ಷಿಣದಲ್ಲಿ ನಿರಂತರ ಪಕ್ಷದ ಸಂಘಟನೆ ಕಾರ್ಯದಲ್ಲಿ ನಿರತಳಾಗಿದ್ದು, ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಈಗಾಗಲೇ ಟಿಕೆಟ್‍ಗೆ ಅರ್ಜಿ ಸಲ್ಲಿಸಿದ್ದೇನೆ. ಕಲ್ಯಾಣ ಕರ್ನಾಟಕದ ಹಿಂದುಳಿದ ವರ್ಗಗಳ ಮಹಿಳೆ ಕೋಟಾದಲ್ಲಿ ತಮಗೆ ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರು.
ತಮ್ಮ ಮನವಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಗೀತಾ ಚಿದ್ರಿ ತಿಳಿಸಿದ್ದಾರೆ.
ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ ಹಾಗೂ ಇತರರು ಇದ್ದರು.