

ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2025-26 ನೇ ಸಾಲಿನ ಬಜೆಟ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬೆನ್ನಿಗೆ ಚೂರಿ ಹಾಕಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು.
ರಾಜ್ಯದ ಎಸ್ಸಿ, ಎಸ್ಟಿಗಳ ಅಭಿವೃದ್ಧಿಗಾಗಿ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಗೆ ಈ ಸಾಲಿನಲ್ಲಿ 42 ಸಾವಿರ ಕೋಟಿ ರೂ, ಅನುದಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೇ ಈ ಕಾಯ್ದೆಯ ನಿಯಮ 7(ಸಿ) ಅನ್ವಯ ಸುಮಾರು 21 ಸಾವಿರ ಕೋಟಿ ರೂ, ಅನುದಾನವನ್ನು ಅಭಿವೃದ್ಧಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಸುಮಾರು 13 ಸಾವಿರ ಕೋಟಿ ರೂ, ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಎಸ್ಸಿ, ಎಸ್ಟಿಗಳಿಗೆ ದ್ರೋಹ ಎಸಗಿದ್ದಾರೆ ಎಂದು ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದೂರಿದರು.
ರಾಜ್ಯದಲ್ಲಿ ಈಗಾಗಲೇ ಇರುವ ವಸತಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡದೇ, 26 ಹೋಬಳಿಗಳಲ್ಲಿ ಎಸ್ಸಿ, ಎಸ್ಟಿ ಗಳಿಗೆ ವಸತಿ ಶಾಲೆಗಳನ್ನು ಆರಂಭಿಸಲು ಹೊರಟಿರುವುದು ಸರ್ಕಾರದ ಧೋರಣೆಯನ್ನು ತೋರಿಸುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೇ ಇಂದಿಗೂ ಸರ್ಕಾರಿ ಹುದ್ದೆಗಳನ್ನು ಭರ್ತಿಮಾಡಿಲ್ಲ. ವಿಶ್ವ ವಿದ್ಯಾಲಯಗಳು, ಸರ್ಕಾರಿ ಕಾಲೇಜುಗಳು ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ, ಬೆಂಬಲ ಬೆಲೆ, ಕೃಷಿ ಆಧಾರಿತ ಕೈಗಾರಿಕೆ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಮಹತ್ವ ನೀಡಿಲ್ಲ. ರಾಜಕಾರಣಿಗಳು ಹಣ ಲೂಟಿ ಮಾಡುವ ಉದ್ದೇಶದಿಂದ ಹನಿ ನೀರಾವರಿ ಘಟಕ, ಕೃಷಿ ಹೊಂಡ ಸ್ಥಾಪಿಸಲು ಮುಂದಾಗಿದ್ದಾರೆ. ಕುಡಿಯುವ ನೀರಿನ ಯೋಜನೆಗಳಿಗೆ ಬಜೆಟ್‌ನಲ್ಲಿ ಕಾಯಕಲ್ಪ ಕಲ್ಪಿಸಿಲ್ಲ. ಮಹಿಳಾ ಸಬಲೀಕರಣಕ್ಕೆ ವಾಸ್ತವಿಕವಾಗಿ ಈ ಬಜೆಟ್ ಒತ್ತು ನೀಡುವುದಿಲ್ಲ ಎಂದರು.
ಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಸಂಯೋಜಕ ವಕೀಲ ಪುಟ್ಟಸ್ವಾಮಿ ರಾಮಸಮುದ್ರ, ಜಿಲ್ಲಾ ಉಸ್ತುವಾರಿ ಅಮಚವಾಡಿ ಪ್ರಕಾಶ್, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಚಂದ್ರಕಾಂತ್ ಹಾಜರಿದ್ದರು.