

ಚಾಮರಾಜನಗರ: ತುಮಕೂರಿನ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಕರ್ನಾಟಕ ಸೇನಾಪಡೆ ವತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಶಿಕ್ಷಣ ಮತ್ತು ದಾಸೋಹ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಡಾ.ಶಿವಕುಮಾರ ಸ್ವಾಮೀಜಿ ಅವರು ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ. ಈ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಸಮಾನತೆಯ ಹರಿಕಾರರಾದ ಶ್ರೀಗಳು ಶತಾಯುಷಿಗಳಾಗಿ ಕೋಟ್ಯಾಂತರ ಭಕ್ತ ವೃಂದವನ್ನು ಹೊಂದಿದ್ದಾರೆ. ಅವರ ಸಾರ್ಥಕ ಸೇವೆಯನ್ನು ಗುರುತಿಸಿ ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ, ನಿಜ ಧ್ವನಿ ಗೋವಿಂದರಾಜು, ಚಾ.ಸಿ.ಸಿದ್ದರಾಜು, ರಾಜಪ್ಪ ಹಾಗೂ ಇನ್ನಿತರರಿದ್ದರು.