

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ನಿವೇಶನ ರೈತರ ಪರವಾಗಿ ಹಾಗೂ ರೈತರ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಕಲಬುರ್ಗಿಯಲ್ಲಿ ಆ. 30ರಿಂದ ಸೆ. 1ರವರೆಗೆ ನಡೆಯಲಿರುವ ರಾಜ್ಯ ಸಮ್ಮೇಳನದ ಬಳಿಕ ಹೋರಾಟ ರೂಪಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ. ರಘು ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ನಡೆದ ಸಿಪಿಐ 14ನೇ ಜಿಲ್ಲಾ ಸಮಾವೇಶದಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿರುವ ನಿವೇಶನ ರಹಿತರ ಪರ ಹಾಗೂ ವಸತಿ ಸಮಸ್ಯೆ ಬಗ್ಗೆ ಹೋರಾಟ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ದೇಶಕ್ಕೆ ಸ್ವತಂತ್ರ ಬಂದು 78 ವರ್ಷ ಕಳೆದರೂ ಜಿಲ್ಲೆಯಲ್ಲಿ ಹಲವು ಮಂದಿಗೆ ನಿವೇಶನ ಹಾಗೂ ವಾಸಿಸಲು ಒಂದು ಸೂರು ಇಲ್ಲದಿರುವುದು ಖಂಡನೀಯ. ನೂರಾರು ಮಂದಿ ಕಾಫಿ ತೋಟದ ಲೈನ್ ಮನೆಗಳಲ್ಲಿ ಪ್ರಾಣಿಗಳಂತೆ ವಾಸ ಮಾಡುತ್ತಿದ್ದಾರೆ. ಇವರಿಗೆ ನಿವೇಶನ ಹಾಗೂ ಸ್ವಂತ ಸೂರು ಕೊಡಿಸುವ ಉದ್ದೇಶದಿಂದ ಹೋರಾಟ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಇನ್ನು ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಯನ್ನು ಕಾಡು ಪ್ರಾಣಿಗಳು ಹಾನಿ ಮಾಡುತ್ತಿದ್ದು, ಬೆಳೆದ ಬೆಳೆ ಕೈಗೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ರಸಗೊಬ್ಬರಗಳ ಬೆಲೆ ಗಗನಕ್ಕೇರಿದ್ದು ಸರಿಯಾದ ಸಮಯಕ್ಕೆ ಗೊಬ್ಬರ ಸಿಗದೇ ರೈತರು ಗೊಬ್ಬರದ ಅಂಗಡಿಗಳ ಮುಂದೆ ರಾತ್ರಿ ಮಲಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಸಬ್ಸಿಡಿ ದರದಲ್ಲಿ ಸರಳವಾಗಿ ರಸಗೊಬ್ಬರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ವೇಳೆ ಆಗ್ರಹಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಿಪಿಐ ರಾಜ್ಯ ಮಂಡಳಿ ಸದಸ್ಯ ಎಚ್.ಎಂ. ರೇಣುಕಾರಾಧ್ಯ, ಪ್ರಮುಖರಾದ ಎಚ್.ಕೆ.ಸೋಮೇಗೌಡ, ಹೆಡದಾಳ್ ಕುಮಾರ್, ವಸಂತ್ ಕುಮಾರ್ ಉಪಸ್ಥಿತರಿದ್ದರು.