

ಮೈಸೂರು: ಮುಡಾ ಅಕ್ರಮ ಪ್ರಕರಣ ಲೋಕಾಯುಕ್ತದಿಂದ ಸರಿಯಾಗಿ ತನಿಖೆ ನಡೆಯುತ್ತಿಲ್ಲ. ಇದರಿಂದ ಸತ್ಯಾಂಶ ಹೊರಬರುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು.
ಲೋಕಾಯುಕ್ತ ಸಂಸ್ಥೆ ಬಗ್ಗೆ ರಾಜ್ಯದ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಮುಡಾ ಹಗರಣದ ಬಗ್ಗೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ(ಇಡಿ) ವತಿಯಿಂದ ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪುನರುಚ್ಚರಿಸಿದರು.
ಸಿದ್ದರಾಮಯ್ಯನ ಕಾಲ ವಿಜಯನಗರ ಸಾಮ್ರಾಜ್ಯದ ಆಡಳಿತದಂತಿದೆ. ಒಂದೂವರೆ ಕೋಟಿ ರೂ. ಬೆಲೆ ಬಾಳುವ ನಿವೇಶನ ಕೇವಲ ಒಂದು ಸಾವಿರ ರೂ.ಗೆ ಸಿಗುತ್ತಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೂ ಇದೇ ರೀತಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಎಂದು ದೂರಿದರು.
ಸಿದ್ದರಾಮಯ್ಯ ಮಾತೆತ್ತಿದರೆ ನಾನು ಅಕ್ಕಿ ಕೊಟ್ಟೆ ಎನ್ನುತ್ತಾರೆ. ಡಿ.ದೇವರಾಜ ಅರಸು ಅವರು ಅಕ್ಕಿ ಬೆಳೆಯುವ ಭೂಮಿಯನ್ನೇ ನೀಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದರು.
ಉಪ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಮೇಲೆ ಮುಡಾ, ವಾಲ್ಮೀಕಿ ನಿಗಮ ಹಗರಣಗಳ ಕಾರ್ಮೋಡ ಕವಿದಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಪೂರಕ ವಾತಾವರಣವಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ.
ಮೆಗಾಸಿಟಿ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆದ್ದರಿಂದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೆಲುವು ಸಾಧಿಸಲಿದ್ದಾರೆ ಎಂದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಗ್ಗೆ ಸಚಿವ ಬೈರತಿ ಸುರೇಶ್ ಅತ್ಯಂತ ಕೀಳು ಮಟ್ಟದ ಪದ ಬಳಸಿ ಟೀಕಿಸಿದ್ದಾರೆ. ಶೋಭಾ ಅವರು ಸುಸಂಸ್ಕೃತ ಹೆಣ್ಣು ಮಗಳು. ಕೇಂದ್ರ, ರಾಜ್ಯದಲ್ಲಿ ಸಚಿವೆಯಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ.
ಸಿದ್ದರಾಮಯ್ಯನ ಇಂತಹ ಚೇಲಾಗಳಿಂದ ರಾಜ್ಯದ ಘನತೆ ಹಾಳಾಗುತ್ತಿದೆ. ರಾಜ್ಯದಲ್ಲಿ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಬಿಟ್ಟುಬಿಟ್ಟಿದ್ದಾರೆ ಎಂದು ಕಿಡಿಕಾರಿದರು.
ನನ್ನ ಬಗ್ಗೆಯೂ ಬೈರತಿ ಸುರೇಶ್ ಕೇವಲವಾಗಿ ಮಾತನಾಡಿದ್ದಾನೆ. ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದಾಗ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಅತ್ಯಂತ ಕಟುವಾಗಿ ಟೀಕಿಸಿದ್ದಾರೆ. ಆದರೆ, ಕಾಂಗ್ರೆಸ್‌ಗೆ ಬಂದು ಸಿದ್ದರಾಮಯ್ಯ ಸಿಎಂ ಆದದ್ದು ವಿಪರ್ಯಾಸ ಎಂದು ಜರಿದರು.