ಸಿರಿಗೆರೆಯಲ್ಲಿ ಮೂರು ದಿನ ನುಡಿಹಬ್ಬ

G.R.Omkarappa
Published on

ಚಿತ್ರದುರ್ಗ: ಸಿರಿಗೆರೆಯ ತರಳಬಾಳು ಬೃಹನ್ಮಠದಲ್ಲಿ ನ. 8, 9, 10ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ತರಳಬಾಳು ನುಡಿಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಿ.ಆರ್.ಓಂಕಾರಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀಮಠವೂ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಪ್ರಚಾರ ಕಾರ್ಯದಲ್ಲಿ ಹೊಸ ಮೈಲಿಗಲ್ಲನ್ನು ರೂಪಿಸುತ್ತಿದೆ. ನಾಲ್ಕೈದು ದಶಕಗಳಿಂದ ಶಿಕ್ಷಣ, ಧರ್ಮ, ಕೃಷಿ, ಸಾಂಸ್ಕೃತಿಕ ಕ್ಷೇತ್ರದಲ್ಲೂ ವಿಶಿಷ್ಟ ಕೊಡುಗೆ ನೀಡುತ್ತಿದೆ ಎಂದರು.

8ರಂದು ವಿವಿಧ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ, ಮಕ್ಕಳಿಂದ ಛದ್ಮವೇಶ, 4 ಸಾವಿರ ವಿದ್ಯಾರ್ಥಿಗಳಿಂದ ನಾಡಗೀತೆ ಗಾಯನ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ವಚನ-ದಾಸ ಸಾಹಿತ್ಯದ ಪುಸ್ತಕಗಳ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ನುಡಿಹಬ್ಬದ ದಿವ್ಯ ಸಾನ್ನಿಧ್ಯ ವಹಿಸುವರು. ಕವಿ-ವಿಚಾರ ಗೋಷ್ಠಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ, ನಾಟಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಸಾಪ ಅಧ್ಯಕ್ಷ ಶಿವಸ್ವಾಮಿ ಮಾತನಾಡಿ, ಸರ್ವಜ್ಞ ಕವಿಯ ತ್ರಿಪದಿಗಳು, ಡಿವಿಜಿ ಅವರ ಮಂಕುತಿಮ್ಮನ ಕಗ್ಗದ ಮೊಬೈಲ್ ತಂತ್ರಾಂಶವನ್ನು ಇದೇ ವೇಳೆ ಕವಿ ಡಾ.ಪ್ರದೀಪ್ ಕುಮಾರ್ ಹೆಬ್ರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

ಪಿಯುಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ. 100ರಷ್ಟು ಅಂಕಗಳಿಸಿದ ವಿದ್ಯಾಸಂಸ್ಥೆಯ ಪಪೂ ಕಾಲೇಜು ವಿದ್ಯಾರ್ಥಿಗಳನ್ನು ಸನ್ಮಾನಿಲಾಗುವುದು. ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಪ್ರಾಥಮಿಕ, ಪ್ರೌಢಶಾಲೆ ಕನ್ನಡ ಶಿಕ್ಷಕರು, ಪಿಯು ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಎರಡೂ ನಗರಗಳಿಂದ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಚಿತ್ರದುರ್ಗ ತಾಲೂಕು ಕಸಾಪ ಅಧ್ಯಕ್ಷ ಪ್ರಶಾಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net