ಸುಭದ್ರ ಸಂವಿಧಾನದಿಂದ ದೇಶದ ಅಭಿವೃದ್ಧಿ

29rajesh5
Published on

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿಯಾಗುವ ಸಂವಿಧಾನ ರಚನೆ ಮಾಡಿದ್ದು, ಅದರ ಮೂಲ ಆಶಯಗಳನ್ನು ಪಾಲನೆ ಮಾಡಬೇಕು. ಸುಭದ್ರವಾದ ಸಂವಿಧಾನದಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.

ತಾಲೂಕಿನ ಭೋಗಾಪುರ ಸರ್ಕಾರಿ ವಸತಿಯುಕ್ತ ಪ್ರಥಮದರ್ಜೆ ಕಾಲೇಜಿನಲ್ಲಿ ಜನಹಿತಾಶಕ್ತಿ ಹೋರಾಟವೇದಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ, ದೇಶದ ಅಭಿವೃದ್ದಿಗೆ ಪೂರಕವಾದ ಸುಭದ್ರ ಸಂವಿಧಾನ ರಚನೆಮಾಡಿದ್ದಾರೆ. ಶಾಲಾಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲೇ ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಅಧ್ಯಯನ ಮಾಡಬೇಕು, ಸಂವಿಧಾನ ಅಧ್ಯಯನ ಮಾಡುವ ಬಹುಪಾಲು ವಿದ್ಯಾರ್ಥಿಗಳ ಜೀವನ ಉತ್ತಮವಾಗುತ್ತದೆ ಎಂದರು.

ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಿ. ಶೈಲೇಶ್ ಕುಮಾರ್ ಮಾತನಾಡಿ, ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮನ್ವಯತೆಯಿಂದ ಬದುಕುವ ಅವಕಾಶ ಕಲ್ಪಿಸಲಾಗಿದೆ. ಸಂವಿಧಾನ ಜಾತಿ, ಧರ್ಮಮೀರಿದ್ದು, ಇದರಲ್ಲಿ ಅಡಕವಾಗಿರುವ ಎಲ್ಲ ಅಂಶಗಳನ್ನು ಪಾಲನೆ ಮಾಡಬೇಕಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು ಮಾತನಾಡಿ, ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಬಗ್ಗೆ ಶಾಲಾಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಶ್ಲಾಘನೀಯ ಕಾರ್ಯವಾಗಿದೆ. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜನಹಿತಾಶಕ್ತಿ ಹೋರಾಟವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್,ಮುಖಂಡ ಇದಾಯತ್ ಷರೀಪ್, ರಾಮಸಮುದ್ರ ಗೋಪಾಲ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net