ಸೆ.14 ರಂದು ರಾಷ್ಟೀಯ ಲೋಕ ಅದಾಲತ್

ಸೆ.14 ರಂದು ರಾಷ್ಟೀಯ ಲೋಕ ಅದಾಲತ್
Published on

ಹಾಸನ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಸೆ.14 ರಂದು 2ನೇ ಶನಿವಾರ ರಾಷ್ಟೀಯ ಲೋಕ್ ಅದಾಲತ್ ನಡೆಯಲಿದೆ. ಕಳೆದ ಜು.13 ರಂದು ನಡೆದ ರಾಷ್ಟೀಯ ಲೋಕ ಅದಾಲತ್ ನಲ್ಲಿ 3,18,316 ಪ್ರಕರಣಗಳನ್ನು ಇತ್ಯರ್ಥಪಡಿಸಿ ಹಾಸನ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ತಿಳಿಸಿದರು.
ಸದರಿ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ರಾಜಿಯಾಗಬಲ್ಲ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು, ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ , ಮೋಟಾರು ಅಪಘಾತ ಪರಿಹಾರ, ಭೂ ಸ್ವಾಧೀನ, ಕಂದಾಯ, ಜನನ ನೋಂದಣಿ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರ ಲಘು ಕ್ರಿಮಿನಲ್ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು, ನೀರಿನ ಕರವಸೂಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಹೇಳಿದರು.
ಸಂಬಂಧಪಟ್ಟ ಕಕ್ಷಿಗಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳ ಬಹುದಾಗಿದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ ಎಂದರು.
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಹೇಳಿದರು.
ಪ್ರತಿ ದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್ ಗಳು ಭೌತಿಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತವೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಇದರಿಂದ ಸಮಯದ ಉಳಿತಾಯವಾಗಲಿದ್ದು, ಶೀಘ್ರ ನ್ಯಾಯದಾನಕ್ಕೆ ಅವಕಾಶವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಅವರು ಮಾತನಾಡಿ, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ತಾಲೂಕುಗಳಲ್ಲಿ ನ್ಯಾಯಾಲಯ ಆವರಣದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net