

ಚಾಮರಾಜನಗರ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಅಂಗವಾಗಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸೆ.17 ರಂದು ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಹಾಗೂ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ ತಿಳಿಸಿದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬರ ಅಂಗವಾಗಿ ಸೆ.17 ರಿಂದ ಅ.2 ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಂತೆ ಸೆ.17 ಬೆಳಗ್ಗೆ 10 ಗಂಟೆಗೆ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಬಳಿಕ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ, ಕಣ್ಣಿನ ತಪಾಸಣೆ ಹಾಗೂ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಕ್ಷಣೆ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದಿಂದ ಬೂತ್ ಮಟ್ಟದವರೆಗೂ ಆಯೋಜನೆ ಮಾಡಲಾಗುತ್ತಿದೆ. ಈ ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡ ಪ್ರಕಾಶ್ ಮಾತನಾಡಿ, ದೇಶದಲ್ಲಿ ಜಿಎಸ್‌ಟಿ ದರವನ್ನು ಪರಿಷ್ಕರಣೆ ಮಾಡುವ ಮೂಲಕ ಬಡವರು, ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರು ಹಾಗೂ ರೈತರಿಗೆ ಕೇಂದ್ರ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೊಡುಗೆ ಅಪಾರವಾಗಿದೆ ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಸಹವಕ್ತಾರ ಮಂಜುನಾಥ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮೂಡಹಳ್ಳಿ ಮೂರ್ತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಕಮಲಮ್ಮ ಮಲೆಯೂರು, ರಾಮಸಮುದ್ರ ಶಿವಣ್ಣ ಹಾಜರಿದ್ದರು.