

ಹಾಸನ : ನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಸೆ.26ರಿಂದ 28ರವರೆಗೂ ಮೂರು ದಿನಗಳ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸುವರ್ಣ ಪಟ್ಟಾಭಿಷೇಕ ಮಹೋತ್ಸವದ ಸವಿನೆನಪಿಗಾಗಿ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು.
ಯುಗಯೋಗಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸುವರ್ಣ ಪಟ್ಟಾಭಿಷೇಕವು ಮಹೋತ್ಸವದ ಸವಿನೆನಪಿಗಾಗಿ ನಗರದಲ್ಲಿ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೆ 26ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮದ ಉದ್ಘಾಟನೆ ಮತ್ತು ಸುವರ್ಣ ತುಲಾಭಾರ ಕಾರ್ಯಕ್ರಮ ಜರುಗಲಿದೆ. ಅದೇ ದಿನ ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಎಂ.ಜಿ. ರಸ್ತೆಯಲ್ಲಿ ಇರುವ ಮಠದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸೆ.27ರಂದು ಬೆಳಿಗ್ಗೆ 10ಕ್ಕೆ ಶ್ರೀಮಠದ ಹಿರಿಯ ಐವತ್ತು ಸದ್ಭಕ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3 ಗಂಟೆಗೆ ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪುತ್ಥಳಿಯೊಂದಿಗೆ ನಗರದ ಕಲಾಭವನದಿಂದ ಶ್ರೀಮಠದವರೆಗೆ 50 ಜಾನಪದ ಕಲಾ ತಂಡಗಳ ಜೊತೆಯಲ್ಲಿ ಬೃಹತ್ ಮೆರವಣಿಗೆ ಮತ್ತು ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ಸೆ.28ರಂದು ಸಂಜೆ 5.30ಕ್ಕೆ ಗುರು ತೋರಿದ ದಾರಿ ತಿಂಗಳ ಮಾಮನ ತೇರಿನ 108ನೇ ಪವಿತ್ರ ಹುಣ್ಣಿಮೆ ಕಾರ್ಯಕ್ರಮ ಮತ್ತು ಸುವರ್ಣ ಬೆಳದಿಂಗಳೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಈ ಪುಣ್ಯ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವ ಮೂಲಕ ಶ್ರೀ ಗುರುದೇವತಾ ಕೃಪೆಗೆ ಪಾತ್ರರಾಗುವಂತೆ ಈ ಮೂಲಕ ಆಶಿಸುತ್ತೇವೆ ಎಂದರು.
ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು ಸೇರಿದಂತೆ ಮಠದ ಸದ್ಭಕ್ತರು ಹಾಜರಾಗುವವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ನಿರ್ದೇಶಕ ರಘುಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ ಇತರರು ಉಪಸ್ಥಿತರಿದ್ದರು.