

ಮೈಸೂರು: ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಸೆ.6ರಂದು ನಗರದಲ್ಲಿ ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗ ಯುವಕ-ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮೇಳದಲ್ಲಿ 120 ಕಂಪನಿಗಳು ಭಾಗವಹಿಸಲಿವೆ. ಕೇವಲ ಪದವಿ ಪಡೆದವರಿಗೆ ಮಾತ್ರವಲ್ಲ.
ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಸಹ ಭಾಗವಹಿಸಬಹುದು. ನಿರುದ್ಯೋಗ ಯುವಕ, ಯುವತಿಯರ ನೋಂದಣಿ ಪ್ರಕ್ರಿಯೆ ಪ್ರಾರಂಭ ಮಾಡಬೇಕು. ಅದಕ್ಕಾಗಿ ಅಭಿಯಾನ ಕೈಗೊಳ್ಳಬೇಕು. ಯುವ ನಿಧಿಯಲ್ಲಿ ನೋಂದಣಿ ಆಗಿರುವವರನ್ನು ಭಾಗವಹಿಸುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಉದ್ಯೋಗ ಮೇಳದ ಯಶಸ್ವಿಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 12 ಸಾವಿರ ನಿರುದ್ಯೋಗಿಗಳು ಯುವನಿಧಿ ಯೋಜನೆಯಡಿ ನೋಂದಣಿ ಆಗಿದ್ದಾರೆ. ಇವರೆಲ್ಲರನ್ನೂ ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಮಾಹಿತಿ ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು.
ಕೇವಲ ನೋಂದಣಿ ಆಗುವುದು ಮಾತ್ರವಲ್ಲ, ಅವರೆಲ್ಲರೂ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉದ್ಯೋಗ ವಿನಿಮಯ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಖಾಸಗಿ ಕಂಪನಿಗಳು ಪಾಲ್ಗೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಕ್ರಮವಹಿಸುವಂತೆ ಸೂಚನೆ ನೀಡಿದರು.
ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.