ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಲಿ

ಕ್ರೀಡಾಕೂಟ
ಕೂಡಿಗೆಯ ಮುರಾರ್ಜಿ ವಸತಿ ಶಾಲೆಯಲ್ಲಿ ಸೋಮವಾರ ಕೂಡಿಗೆ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಖೋಖೋ ಆಡುತ್ತಿರುವ ವಿದ್ಯಾರ್ಥಿಗಳು.
Published on

ಕುಶಾಲನಗರ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಲಿಕಾ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಅಭಿಪ್ರಾಯಪಟ್ಟರು.

ಕೂಡಿಗೆಯ ಮುರಾರ್ಜಿ ವಸತಿ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕೂಡಿಗೆ ಪ್ರಾಥಮಿಕ ಶಾಲಾ ವಲಯಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಎರಡನ್ನು ಸಮನಾಗಿ ಸ್ವೀಕರಿಸಬೇಕು. ಕ್ರೀಡೆಯಲ್ಲಿ ಸಕ್ರಿಯವಾಗುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬಹುದು. ಆ ಮೂಲಕ ವಿದ್ಯಾರ್ಥಿ ಜೀವನದಿಂದಲೇ ಪ್ರತಿಯೊಬ್ಬರೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನ ಪಡಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕೆ.ಪ್ರಕಾಶ್ ಮಾತನಾಡಿ, ಪ್ರಸ್ತುತ ಎಲ್ಲ ವಿದ್ಯಾರ್ಥಿಗಳು ಓದುವುದರ ಜತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಭವಿಷ್ಯದಲ್ಲಿ ಉದ್ಯೋಗಕ್ಕೆ ಸೇರಲು ಕ್ರೀಡೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕೂಡಿಗೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶಾಂತಕುಮಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕುರುಂಬಯ್ಯ, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯ ಸಮಿತಿ ನಿರ್ದೇಶಕ ಯೋಗೇಶ್, ಸೋಮವಾರಪೇಟೆ ತಾಲೂಕು ಜೆಸಿಐ ಅಧ್ಯಕ್ಷೆ ರುಬಿನಾ, ದೈಹಿಕ ಶಿಕ್ಷಣ ಶಿಕ್ಷಕರಾದ ನೀಲಪ್ಪ, ಸೋಮಶೇಖರ್, ಶೋಭಾ, ಸುಂದರ್, ಲೋಹಿತ್, ದೊಡ್ಡಯ್ಯ, ಶಿಕ್ಷಕರಾದ ಮಂಜು, ನಾಗೇಂದ್ರ, ದಿನೇಶ್ ಆಚಾರಿ ,ಆಸಿಫ್, ಚಿದಂಬರ, ಹರಿಣಾಕ್ಷಿ, ಮೀನಾ, ನಿಲಯಪಾಲಕ ಜಗದೀಶ್, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net